Sunday, 8th September 2024

ಬಾಲ್ಯ ವಿವಾಹಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ 

ತುಮಕೂರು: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಕಟ್ಟೆಚ್ಚರವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಹಿಳೆ ಮತ್ತು ಅಪ್ರಾಪ್ತರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕಾರ್ಯಕ್ರಮ ಮತ್ತು ಕಟ್ಟು ನಿಟ್ಟಿನ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.
ನಂತರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜು, ಮೊದಲ ತ್ರೆöÊಮಾಸಿಕದಲ್ಲಿ ಕೌಟುಂಬಿಕ ಹಿಂಸೆ ಯಿ0ದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದ್ದ 68 ಪ್ರಕರಣಗಳಲ್ಲಿ 40 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥ ಪಡಿಸಲಾಗಿದೆ.
ಉಳಿದಂತೆ ನ್ಯಾಯಾಲಯದಲ್ಲಿ 11 ಹಾಗೂ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ 17 ಸೇರಿ ಒಟ್ಟು 28 ಪ್ರಕರಣಗಳು ಬಾಕಿಯಿವೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಸ್ವಾಂತ್ವನ ಕೇಂದ್ರಗಳಲ್ಲಿ ಒಟ್ಟು 350 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 331 ಪ್ರಕರಣಗಳು ಇತ್ಯರ್ಥಗೊಂಡು 19 ಪ್ರಕರಣಗಳು ಬಾಕಿ ಇವೆ ಎಂದು ಸಭೆಗೆ ಮಾಹಿತಿ ನೀಡಿದರು.
 ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ 2024ರ ಜನವರಿ ಮಾಹೆಯಿಂದ ಜೂನ್ ಮಾಹೆಯವರೆಗೆ ಒಟ್ಟು 63 ಪ್ರಕರಣಗಳು ದಾಖಲಾಗಿದ್ದು, 25 ಪ್ರಕರಣಗಳು ವಿಲೇವಾರಿಯಾಗಿ 38 ಪ್ರಕರಣಗಳು ಬಾಕಿ ಉಳಿದುಕೊಂಡಿವೆ. ಅತ್ಯಾಚಾರ/ ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಮಕ್ಕಳಿಗೆ ಸಮಾಲೋ ಚನೆ, ವೈದ್ಯಕೀಯ, ಕಾನೂನು ಸಲಹೆ, ಪೊಲೀಸ್ ನೆರವನ್ನು ಒಂದೇ ಸೂರಿನಡಿ ಒದಗಿಸಲು ತೆರೆಯಲಾದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ 154 ಪ್ರಕರಣಗಳು ದಾಖಲಾಗಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!