Friday, 13th December 2024

ಇಂದಿನಿಂದ ಉಡುಪಿ, ದ.ಕನ್ನಡದಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಆರಂಭ

ಡುಪಿ/ಮಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ಬುಧವಾರದಿಂದ ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.24ರಿಂದ ಜು.27ರವರೆಗೆ ಮಂಗಳೂರು ತಾಲೂಕು ಕಚೇರಿ ಆವರಣದ ಸರ್ಕಾರಿ ನೌಕರರ ಸಂಘದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ. ಅರ್ಜಿ ಸಲ್ಲಿಸಿದ ಶಿಕ್ಷಕರು ನಿರ್ದಿಷ್ಟ ದಿನದಂದು ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಡಿಡಿಪಿಐ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯೊಳಗೆ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರ ಕೌನ್ಸೆಲಿಂಗ್‌ ಜು.24ರಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುತ್ತಿದೆ. ಬೆಳಗ್ಗೆ 10.30ರಿಂದ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನ 200 ಮಂದಿಗೆ ಅವಕಾಶ ಸಿಗಲಿದೆ.

ಜು.25ರಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಲಿದೆ. ಜು.26ರಂದು ಪ್ರೌಢಶಾಲೆಯ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಲಿದೆ. ಜು. 29ರಂದು ಸರಕಾರಿ ಪ್ರೌಢಶಾಲಾ ಶಿಕ್ಷಕರ ಹಾಗೂ ಜು. 30ರಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಡಿಡಿಪಿಐ ಕಚೇರಿಯಲ್ಲಿ ನಡೆಯಲಿದೆ.