Sunday, 15th December 2024

ಮೈಸೂರಿನಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ…!

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯ ದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ.

ತಡೆಗಟ್ಟಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶಗಳನ್ನು ತಪ್ಪದೇ ಪಾಲಿಸುವುದು ಸಾರ್ವಜನಿಕರ ಜವಾ ಬ್ದಾರಿಯಾಗಿರುತ್ತದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶವಿದ್ದು, ಉಳಿದ ಸಮಯ ದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಾಲಿಕೆ ಆರೋಗ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಇತರೆ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿಗಳನ್ನು ಬಳಸುವ ಸಂದರ್ಭದಲ್ಲಿ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆ ಯಾಗದಂತೆ ಬಳಸಬೇಕು. ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ಯಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ.

ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್‌ಗಳ ಮೇಲೆ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ್ ಸಹ ಇರುತ್ತದೆ ಎಂದು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.