Thursday, 12th December 2024

ಚನ್ನಪಟ್ಟಣ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ರಾಮನಗರ: ಮುಂದಿನ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ. ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರ ಸ್ವಾಮಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ತಾಲೂಕಿನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಜೊತೆಗೆ ಸಭೆ ನಡೆಸಿದ ಕುಮಾರಸ್ವಾಮಿ, ಸ್ವಕ್ಷೇತ್ರದಲ್ಲಿ ಪಕ್ಷವನ್ನ ಸದೃಢವಾಗಿ ಗಟ್ಟಿ ಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಕಾರ್ಯಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾರ್ಯಕರ್ತರು ಈ‌ ರೀತಿ ವದಂತಿಗಳಿಗೆ ಕಿವಿ ಕೊಡಬೇಡಿ ಹಾಗೂ ಆತಂಕ ಪಡಬೇಡಿ ಎಂದರು.

ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಈಗಾಗಲೇ ಹಣದ ಹೊಳೆ ಹರಿಯುತ್ತಿದೆ. ಹಣ ಕೊಟ್ಟು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಕೆಲಸ ನಡೆಯುತ್ತಿದೆ. ಇದಕ್ಕೆಲ್ಲ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಸೊಪ್ಪು ಹಾಕ ಬೇಡಿ ಎನ್ನುವ ಮೂಲಕ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌ಗೆ ಪರೋಕ್ಷ ವಾಗಿ ಕುಟುಕಿದರು.

ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಸಂಘಟಿತರಾಗಿ ಚುನಾವಣೆ ದಿನದವರೆಗೆ ಒಗ್ಗಟ್ಟಿನಿಂದ ಕೆಲಸ ಮಾಡಿ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆಕೊಟ್ಟರು.

ರಾಜ್ಯದ ಹಲವಾರು ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ‌ಸ್ಪರ್ಧೆ ಮಾಡುವಂತೆ ಮುಖಂಡರು ಹಾಗೂ ಕಾರ್ಯ ಕರ್ತರು ಒತ್ತಾಯಿಸುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದರು.