Tuesday, 23rd April 2024

ಕುಂದಾಪುರ ಶಾಸಕರ ವಿರುದ್ಧ ವಿದ್ಯಾರ್ಥಿನಿಯರ ಹೈಕೋರ್ಟ್ ಮೊರೆ

ಕುಂದಾಪುರ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪ ಮಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ಮೂಲಕ ಈಗ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಹೇಳಿದರೆ, ಇನ್ನೊಂದೆಡೆ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಹಿಜಾಬ್‌ ಧರಿಸಿದರೆ ನಾವೂ ಕೂಡಾ ಕೇಸರಿ ಶಾಲು ಧರಿಸುತ್ತೇವೆ ಎಂದು ಹೇಳುತ್ತಿದ್ದಾರೆ.

ತೃತೀಯ ಬಿಬಿಎ ವಿದ್ಯಾರ್ಥಿ ಸುಹಾ ಮೌಲಾನಾ ಅವರು ತಮ್ಮ ತಾಯಿ ಬೀಬಿ ಸಾರಾ ಮತ್ತು ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್‌ ಅವರು ತಮ್ಮ ತಾಯಿ ರಹಮತ್‌ ಅವರ ಮೂಲಕ ಹೈಕೋರ್ಟ್‌ಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಮನವಿ ಸಲ್ಲಿಕೆ ಮಾಡಿದ್ದಾರೆ. ಹಾಗೆಯೇ ಮಂಗ ಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌, ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿನ ಪರವಾಗಿ ಪ್ರಾಂಶುಪಾಲರುಗಳ ವಿರುದ್ಧವೂ ಅರ್ಜಿ ಸಲ್ಲಿಸಲಾ ಗಿದೆ.

ಮನವಿಯಲ್ಲಿ ಏನಿದೆ?: ತಮಗೆ ಯಾವುದೇ ನಿರ್ಬಂಧ ಹಾಗೂ ಷರತ್ತು ಹೇರದ ಕಾಲೇಜಿಗೆ ಪ್ರವೇಶ ಮಾಡಲು ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಆದೇಶ ನೀಡಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ಸೂಚನೆ ನೀಡಲು ವಿದ್ಯಾರ್ಥಿನಿಯರು ಹೈಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಹೇಳಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿನಲ್ಲಿ ತಮ್ಮ ರಾಜಕೀಯ ಅಜೆಂಡಾವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಕಾಲೇಜು ಆರಂಭ ಮಾಡಿದಾಗಿನಿಂದ ನಮಗೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ ಫೆ.3ರಂದು ಏಕಾಏಕಿ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಹಿಜಾಬ್‌ ಧರಿಸಿ ಕಾಲೇಜಿಗೆ ಬರಬಾರದು ಎಂದು ಹೇಳಿದ್ದಾರೆ. ಈಗ ಸರ್ಕಾರದ ಆದೇಶವಿದೆ ಎಂದು ನಿರ್ಬಂಧ ವಿಧಿಸಲಾಗುತ್ತಿದೆ.

error: Content is protected !!