ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 15 ಹಾಗೂ 16ರಂದು ನಡೆಯಲಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಅವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಜಾತ್ರೆಯಾದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ವಾಗಿ ಆಚರಿಸುವ ದೃಷ್ಟಿಯಿಂದ ಸಮ್ಮೇಳನ ದಲ್ಲಿ ಕನ್ನಡ ನಾಡು-ನುಡಿ ಕುರಿತು ಉತ್ತಮ ಕವಿಗೋಷ್ಠಿ, ಸಂವಾದ, ವಿಶೇಷ ಉಪನ್ಯಾಸ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಆಯಾಮಗಳು, ಸಾಹಿತ್ಯ ಪರಂಪರೆ, ಸಾಂಸ್ಕೃತಿಕ ಪರಂಪರೆ, ಜಾನಪದ ಕಲಾ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಮಾತನಾಡಿ, ಡಿಸೆಂಬರ್ 15ರಂದು ಉದ್ಘಾಟನೆ ಸಮಾರಂಭ ಜರುಗಲಿದ್ದು, ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಿರಿಯ ಸಾಹಿತಿ ಎಂ.ವಿ. ನಾಗರಾಜರಾವ್ ಅವರನ್ನು ಸಮ್ಮೇಳನಾ ಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಕಲಾವಿದರು ಬೆಳ್ಳಿರಥ, ಆನೆ, ಕೋಲಾಟ, ನಂದೀಧ್ವಜ, ವೀರಗಾಸೆ, ಡೊಳ್ಳುಕುಣಿತ, ಸೋಮನಕುಣಿತ, ನಾಸಿಕ್ ಡೋಲು, ನಾದಸ್ವರ, ಗಾರುಡಿಗೊಂಬೆ ಸೇರಿದಂತೆ ಸುಮಾರು 35 ಕಲಾ ಪ್ರಕಾರಗಳ ಪ್ರದರ್ಶನ ನೀಡಲಿದ್ದಾರೆ.
ಸಮ್ಮೇಳನಕ್ಕೆ ಆಗಮಿಸುವ ನೌಕರರಿಗೆ ಅನುವಾಗುವಂತೆ ಓಓಡಿ (ಅನ್ಯ ಕಾರ್ಯದ ನಿಮಿತ್ತ) ಸೌಲಭ್ಯ ನೀಡಲು ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರಲ್ಲದೆ ನೌಕರರು ಸಮ್ಮೇಳನದಲ್ಲಿ ಭಾಗವಹಿಸಲು 200 ರು.ಗಳ ಪ್ರತಿನಿಧಿ ಶುಲ್ಕವನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ರವೀಶ್ ಹಾಗೂ ಕಲಾವಿದ ಮನುಚಕ್ರವರ್ತಿ ಅವರು ವಿನ್ಯಾಸಗೊಳಿಸರುವ ಸಮ್ಮೇಳನದ ಲೋಗೋ(ಲಾಂಛನ) ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಟೂಡಾ ಅಧ್ಯಕ್ಷೆ ಹೆಚ್.ಜಿ. ಚಂದ್ರಶೇಖರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ.
ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ರಾಣಿ ಸತೀಶ್, ಮಲ್ಲಿಕಾರ್ಜುನ ಕೆಂಕೆರೆ, ಟೂಡಾ ಆಯುಕ್ತ ಗೋಪಾಲ್ ಜಾದವ್, ಪಾಲಿಕೆ ಉಪ ಆಯುಕ್ತ(ಆಡಳಿತ) ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.