Thursday, 12th December 2024

ಕನ್ನಡ ನಾಮಫಲಕ ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವು ವಿಸ್ತರಣೆ

ಬೆಂಗಳೂರು: ಶೇ.60 ರಷ್ಟು ಕನ್ನಡ ಬೋರ್ಡ್ ಹಾಕದ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದ್ದು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.

ಡೆಡ್​ಲೈನ್ ಮುಕ್ತಾಯ ಹಿನ್ನೆಲೆಯಲ್ಲಿ ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮ ಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.