Sunday, 19th May 2024

ಕುರುಬ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಆಗ್ರಹ

ತುಮಕೂರು: ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಕುರುಬ ಸಮುದಾಯದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶ್ ಮೂರ್ತಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರ ಶೀಘ್ರ ನಿಗಮ ಘೋಷಣೆ ಮಾಡಬೇಕು ಹಾಗೂ 400 ಕೋಟಿ ಅನುದಾನವನ್ನು ನೀಡದೇ ಇದ್ದರೆ ಎಲ್ಲ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ರಾಜಗೊಂಡ, ಗೊಂಡ, ಕಾಡು ಕುರುಬ, ಜೇನು ಕುರುಬದಂತೆ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಶಿಫಾರಸ್ಸನ್ನು ಒಪ್ಪಿಕೊಳ್ಳುವ ಮೂಲಕ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ ಆರ್ಥಿಕ ಜನಗಣತಿಯ ವರದಿಯನ್ನು ಬಿಡುಗಡೆಗೊಳಿಸಬೇಕು ಹಾಗೂ ವರದಿಯನ್ನು ಸ್ವೀಕರಿಸಿ ಜಾರಿಗೊಳಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ ಅವರು 150 ಕೋಟಿ ವೆಚ್ಚದಲ್ಲಿ ನಡೆದಿರುವ ವರದಿಯನ್ನು ಬಹಿರಂಗಗೊಳಿಸುವ ಮೂಲಕ ರಾಜ್ಯದಲ್ಲಿ ಯಾವ ಯಾವ ಸಮುದಾಯದ ಸಂಖ್ಯೆ ಎಷ್ಟಿದೆ ಎನ್ನುವುದನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಪಂಗಡ ಹೋರಾಟ ಸಮಿತಿ ಸಂಚಾಲಕ ಶಾಂತಪ್ಪ ಮಾತನಾಡಿ, ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ಮೂಲಕ ಅವರಲ್ಲಿರುವ ಗೊಂದಲವನ್ನು ನಿವಾರಣೆ ಮಾಡುವ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಪ್ರದೇಶ ಕುರುಬರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಗೊಳ್ಳಲಾಗಿದೆ ಎಂದರು.

ಹೋರಾಟದಲ್ಲಿ ಎಂ.ಟಿ.ನಾಗರಾಜು, ಬೈರತಿ ಬಸವರಾಜು, ಕೆ.ಎಸ್.ಈಶ್ವರಪ್ಪ, ವಿಶ್ವನಾಥ್ ಸೇರಿದಂತೆ ಸಮುದಾಯದ ಜನ ಪ್ರತಿನಿಧಿಗಳು ಹಾಗೂ ಸಮುದಾಯದ ಜಗದ್ಗುರುಗಳಾದ ಈಶ್ವರಾನಂದಪುರಿ ಸ್ವಾಮೀಜಿ ನೇತೃತ್ಬದಲ್ಲಿ ಹೋರಾಟ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮಾಜಿ ವಿಧಾನಪರಿಷತ್ ಸದಸ್ಯ ಹುಲಿ ನಾಯ್ಕರ್, ಆಚಾರ್ಯ ನಾಗರಾಜು, ಸಂಘದ ಕಾರ್ಯಾಧ್ಯಕ್ಷ ವೆಂಕಟೇಶ್ ಮೂರ್ತಿ, ಸುಬ್ರಮಣ್ಯ, ರಾಮಚಂದ್ರಪ್ಪ, ಶಿವಪ್ಪ, ಡಾ.ಸೌಮ್ಯ, ಶರತ್, ರಘುರಾಮ್,ಶಂಕರ್, ಪುಟ್ಟರಾಜು, ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *

error: Content is protected !!