Saturday, 14th December 2024

ಜು.8ಕ್ಕೆ ಜನತಾ ನ್ಯಾಯಾಲಯ: ನ್ಯಾಯಾಧೀಶೆ ಬಿ.ಗೀತಾ

ತುಮಕೂರು: ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 89,447 ಪ್ರಕರಣಗಳಲ್ಲಿ 16,188 ಪ್ರಕರಣಗಳು ಹಾಗೂ ಪೂರ್ವ ವ್ಯಾಜ್ಯ ಪ್ರಕರಣ ಗಳು ಸೇರಿ ಒಟ್ಟು 1,55,144 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಕರ್ನಾಟಕ ರಾಜ್ಯವು ಹಿಂದಿನ ಲೋಕ್ ಅದಾಲತ್‌ಗಳಲ್ಲಿ ಹೆಚ್ಚಿನ ಪ್ರಕರಣಗಳನ್ನು ವಿಲೇವಾರಿ ಮಾಡಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಬಿ. ಗೀತಾ ಹೇಳಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಲೋಕ್ ಅದಾಲತ್ ಮೂಲ ಆಶಯ ವೆಂದರೆ, ಕಕ್ಷಿದಾರರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳ ಬಹುದು ಇದರಿಂದ ಕಕ್ಷಿದಾರರ ಮಧ್ಯೆ ಇರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.
 ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 8ಕ್ಕೆ ಲೋಕ್ ಅದಾಲತ್ ಏರ್ಪಡಿಸಲಾಗಿದೆ. ಇದರ ಪ್ರಯುಕ್ತ ಕಕ್ಷಿದಾರರ ಜೊತೆ ಪೂರ್ವಬಾವಿ ಸಭೆಗಳನ್ನು ಮಾಡಲಾಗುತ್ತಿದೆ. ಜನಸಾಮಾನ್ಯರಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ.
ಸದರಿ  ಲೋಕ್ ಅದಾಲತ್‌ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕಾರ್ಮಿಕ ವಿವಾದ, ವಿದ್ಯುತ್, ನೀರಿನ ಶುಲ್ಕ ಹಾಗೂ ರಾಜೀಯಾಗಬಲ್ಲ ಅಪರಾಧಿಕ, ವೈವಾಹಿಕ ಹಾಗೂ ಸಿವಿಲ್ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ವೈವಾಹಿಕ/ಕುಟುಂಬ ನ್ಯಾಯಾಲಯದ (ವಿಚ್ಚೇದನೆಯನ್ನು ಹೊರತುಪಡಿಸಿ), ಮೋಟಾರು ಅಪಘಾತ ಪರಿಹಾರ ಪ್ರಕರಣ, ಭೂಸ್ವಾದೀನ ಪ್ರಕರಣ, ರಾಜೀಯಾಗಬಲ್ಲ ಸಿವಿಲ್ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.
ಸದರಿ ದಿನದಂದು ನಡೆಯುವ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಿದೆ ಎಂದರು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಸಮಿತಿಯ ಈ ಮೇಲ್ ವಿಳಾಸ ಜಟsಚಿಣumಞuಡಿ1@gmಚಿiಟ.ಛಿom ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ದೂರವಾಣಿ ಸಂಖ್ಯೆ 0816-2255133/ 9141193959ನ್ನು ಸಂಪರ್ಕಿಸಿ ಖುದ್ದು ಹಾಜರಾಗುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಉಪಸ್ಥಿತರಿದ್ದರು.