Thursday, 12th December 2024

Lokayukta Action: ತ್ಯಾಜ್ಯ ವಿಲೇವಾರಿ ಮಾಡದ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲು : ಲೋಕಾಯುಕ್ತ ನ್ಯಾಯಮೂರ್ತಿ 

ತುಮಕೂರು: ನಗರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಬಹು ದೊಡ್ಡ ಸಮಸ್ಯೆಯಾಗಿ ಬೆಳೆಯುತ್ತಿದೆ. ಸಮರ್ಪಕ ವಾಗಿ ತ್ಯಾಜ್ಯ ವಿಲೇವಾರಿಯಾಗದಿದ್ದಲ್ಲಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದ್ದು, ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ತ್ಯಾಜ್ಯ ಮುಕ್ತ ನಗರವನ್ನಾಗಿ ನಿರ್ಮಾಣ ಮಾಡಬೇಕು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡದ ಸ್ಥಳೀಯ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ನ್ಬಿಯಾಯಮೂರ್ತಿ .ಎಸ್.ಪಾಟೀಲ್ ಎಚ್ಚರಿಕೆ ನೀಡಿದರು.

ನಗರದಲ್ಲಿ ಬುಧವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ತ್ಯಾಜ್ಯ ನಿರ್ವಹಣೆಯನ್ನು ಪರಿಶೀಲಿಸಲು ರಾಜ್ಯದಲ್ಲಿ 8 ವಲಯಗಳನ್ನು ಗುರುತಿಸಿ ಜಾಗೃತ ದಳ ಅಧಿಕಾರಿಯನ್ನು ನೇಮಿಸಲಾಗಿದೆ. ದೂರು ಬಂದ ಪ್ರದೇಶಕ್ಕೆ ಜಾಗೃತ ದಳ ಭೇಟಿ ನೀಡಿ ಕಸ ವಿಲೇವಾರಿ ಮಾಡುವ, ಕಸವನ್ನು ತೆರವುಗೊಳಿಸಿ ಪುನಃ ಕಸ ಸಂಗ್ರಹವಾಗದAತೆ ವ್ಯವಸ್ಥೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜವಾಬ್ದಾರಿ ನೀಡುವ ಕೆಲಸ ಲೋಕಾಯುಕ್ತದಿಂದ ಮಾಡಲಾಗುತ್ತಿದೆ. ಈ ಕ್ರಮದಿಂದ ರಾಜ್ಯದ ಚಿತ್ರದುರ್ಗ, ಬಿಜಾಪುರ, ಶಿವಮೊಗ್ಗ ನಗರಗಳಲ್ಲಿ ಸಂಗ್ರಹವಾಗಿದ್ದ 100 ಟನ್‌ಗೂ ಹೆಚ್ಚಿನ ತ್ಯಾಜ್ಯ ವಿಲೇವಾರಿಯಾಗಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಜವಾಬ್ದಾರಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು. 

ಜನಪ್ರತಿನಿಧಿಗಳು, ಸರ್ಕಾರಿ ಇಲಾಖೆ ಅಧಿಕಾರಿ, ಸಿಬ್ಬಂದಿವರ್ಗ, ಸ್ಥಳೀಯ ಸಂಸ್ಥೆಗಳು ಪ್ರಾಮಾಣ ಕವಾಗಿ ಸಾರ್ವ ಜನಿಕ ಸೇವೆಗಳನ್ನು ಒದಗಿಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ವಿವಿಧ ಅಭಿವೃದ್ಧಿ ಯೋಜನೆಗಳಡಿ ಬಿಡುಗಡೆಯಾಗುವ ಕೋಟ್ಯಾಂತರ ರೂ.ಗಳ ಅನುದಾನವನ್ನು ಉದ್ದೇಶಿತ ಕಾಮಗಾರಿಗಳಿಗೆ ವಿನಿಯೋಗಿಸುವಲ್ಲಿ ನಿರ್ಲಕ್ಷö್ಯ ತೋರುವ ಅಧಿಕಾರಿಗಳ ಮೇಲೆ ಸ್ವಯಂಪ್ರೇರಿತವಾಗಿ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. 

ಮಂದಗತಿ ಕೆಲಸ

ಕಳೆದ 3 ವರ್ಷಗಳಿಂದ ಕೆರೆ ಒತ್ತುವರಿಯ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಬೇಕೆಂದು ಹಲವಾರು ಬಾರಿ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಅಧಿಕಾರಿಗಳು ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದು ಬೇಸರದ ಸಂಗತಿ. ಜಿಲ್ಲೆಯಲ್ಲಿ ಸುಮಾರು ಕೆರೆಗಳ ಸಮೀಕ್ಷೆ ಪೂರ್ಣಗೊಂಡಿಲ್ಲ. ಸಮೀಕ್ಷೆ ಮಾಡಿದ ಕೆರೆಗಳ ಒತ್ತುವರಿ ಇನ್ನೂ ತೆರವಾಗಿಲ್ಲ. ಕೆರೆಗಳ ಪುನಃಶ್ಚೇತನವೂ ಆಗಿಲ್ಲ. ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳಿಂದ ಕೆರೆಗಳ ಅಭಿವೃದ್ಧಿ ಹೇಗೆ? ನೀರಿನ ಸಮಸ್ಯೆಗೆ ಪರಿಹಾರ ಹೇಗೆ? ಈ ನಿಟ್ಟಿನಲ್ಲಿ ಅಧಿಕಾರಿಗಳು ಸುಧಾರಿಸಿಕೊಳ್ಳದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಸರಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಚಿಕಿತ್ಸೆ 

ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ರೋಗಿಗಳು ಭೇಟಿ ನೀಡಿದಾಗ ವೈದ್ಯರು ಲಭ್ಯವಿರದೆ, ತುರ್ತು ಚಿಕಿತ್ಸೆ ದೊರೆ ಯದೆ ಎಷ್ಟೋ ರೋಗಿಗಳು ಸಾವನ್ನಪ್ಪಿರುವ ಬಗ್ಗೆ ವರದಿಗಳು ಬಂದಿವೆ. ರೋಗಿಗಳು ಒಳರೋಗಿಯಾಗಿ ದಾಖಲಾ ಗಲು ಹಣ ಕೊಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲದಕ್ಕೂ ಹಣ ಬಿಚ್ಚಿದರೆ ಮಾತ್ರ ಚಿಕಿತ್ಸೆ ಎಂಬಂತಾಗಿದೆ. ಆಸ್ಪತ್ರೆ ಸಿಬ್ಬಂದಿಗಳು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅನುಸರಣೆ ಮಾಡಲು ಆಸ್ಪತ್ರೆಗಳು, ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲು ಎಲ್ಲ ಜಿಲ್ಲೆಯ ಲೋಕಾಯುಕ್ತ ಎಸ್‌ಪಿ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲೆಯ ಜನಸಂಖ್ಯೆ, ಆರೋಗ್ಯ,  ಶೈಕ್ಷಣಿಕ ಪ್ರಗತಿ, ಕೃಷಿ ಪ್ರಗತಿ, ಪ್ರಮುಖ ಬೆಳೆ, ಶಾಲಾ-ಕಾಲೇಜುಗಳ ವಿವರ, ನೀರಿನ ಸಮಸ್ಯೆ, ವಸತಿ ನಿಲಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಆರೋಗ್ಯ ತುಮಕೂರು ಅಭಿಯಾನದ ರೂಪು-ರೇಷೆ, ಸಾಧನೆಗಳ ಬಗ್ಗೆ ವಿವರಿಸಿದರು. 

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಲೋಕಾಯುಕ್ತ ಎಸ್‌ಪಿ ಎ.ವಿ. ಲಕ್ಷಿö್ಮನಾರಾಯಣ ಸೇರಿದಂತೆ ಮತ್ತಿತರರು ಹಾಜರಿದ್ದರು.

 ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ; ತರಾಟೆ

ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ಅವರು ಜಿಲ್ಲಾ ಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.