ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ. 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ದಿನದಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರ ರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು. ಈ ಆದೇಶ ಉಲ್ಲಂಘನೆ ಮಾಡಿದರೆ ಸಂಬಂಧಪಟ್ಟ ಸಂಸ್ಥೆ, ನಿಯೋಜಕರು, ವ್ಯವಸ್ಥಾಪಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಯಾವುದೇ ಅರ್ಹ ಮತದಾರ ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.