Friday, 13th December 2024

ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಮಿಳುನಾಡು ಅವಕಾಶ ನೀಡಲ್ಲ: ಕಾಂಗ್ರೆಸ್‌ಗೆ ಬಿಸಿತುಪ್ಪ

ಮಂಡ್ಯ: ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವಕಾಶ ನೀಡಲ್ಲ ಎಂದಿರುವುದು ಮಿತ್ರಪಕ್ಷ ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿದೆ. ಇದು ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರಬಲ ಅಸ್ತ್ರವಾಗಿದೆ.

ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆಯ ಅಂಶವನ್ನು ಪ್ರಸ್ತಾಪಿಸಿದೆ. ಅದರಂತೆ ತಮ್ಮ ಒಕ್ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲವೆಂದು ಸ್ಪಷ್ಟಪಡಿಸಿದೆ. ಇನ್ನು ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಮೇಕೆದಾಟು ವಿಷಯವನ್ನೇ ಮುಂದಿಟ್ಟುಕೊಂಡು ಪಾದಯಾತ್ರೆ ಮಾಡಿದ ಕಾಂಗ್ರೆಸ್‌ಗೆ ಡಿಎಂಕೆ ನಡೆ ಮುಜುಗರ ತಂದಿಟ್ಟಿದೆ. ಮಾತ್ರವಲ್ಲದೆ ಚುನಾವಣೆಯಲ್ಲಿ ವಿಪಕ್ಷಕ್ಕೆ ಪ್ರಮುಖ ಅಂಶವಾಗಿದೆ.

ಪಾಂಡವಪುರ ಪಟ್ಟಣದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ತಮಿಳುನಾಡು ಸಿಎಂ ಸ್ಟಾಲಿನ್ ಮೇಕೆದಾಟು ಡ್ಯಾಂ ಕಟ್ಟಲು ಬಿಡಲ್ಲವೆಂದು ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ಅಂತವರ ಸಹವಾಸ ಮಾಡಿರುವ ಕಾಂಗ್ರೆಸ್‌ನವರಿಗೆ ನಾಚಿಗೆಯಾಗಬೇಕು. ರಾಜ್ಯದ ಜನ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರೇ ಮೈತ್ರಿ ಅಭ್ಯರ್ಥಿ. ನಾನೆ ನಿಂತು ಚುನಾವಣೆ ಮಾಡಲಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರ ಆಶೀರ್ವಾದ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹಕಾರದಿಂದ ಅತ್ಯಂತ ಬಹುಮತದಿಂದ ಗೆಲ್ಲಲಿದ್ದೇವೆ. ಕೋಲಾರ, ಮಂಡ್ಯ, ಹಾಸನ ಸೇರಿದಂತೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಿದ್ದೇವೆ. ಸಣ್ಣಪುಟ್ಟ ವ್ಯತ್ಯಾಸಗಳನ್ನ ಬಗೆ ಹರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾ.22ರಂದು ಬಿಜೆಪಿ ಹೈಕಮಾಂಡ್ ಜೆಡಿಎಸ್‌ಗೆ ಯಾವ ಕ್ಷೇತ್ರಗಳೆಂದು ತಿಳಿಸಲಿದೆ ಎಂದರು.

ನಾನು ದೇವೇಗೌಡರ ಮನೆ ಮಗನಾಗಿದ್ದೇನೆ. ನನ್ನ ಕೊನೆ ಉಸಿರು ಇರುವವರೆಗೂ ದೇವೇಗೌಡರ ಮನೆ ಮಗನಾಗಿಯೇ ಇರುತ್ತೇನೆ ಎಂದರು.

ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆಯೊಡ್ಡುವುದಾಗಿ ಮೈತ್ರಿ ಪಕ್ಷವಾಗಿರುವ ಡಿ.ಎಂ.ಕೆ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್, ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿ ಮೇಕೆದಾಟು ಅಣೆಕಟ್ಟನ್ನು ಕಟ್ಟಿಯೇ ತೀರುತ್ತೇವೆ ಎಂದು ದೃಢ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ಣಯಕ್ಕೆ ಮನ್ನಣೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.