ಗೌರಿಬಿದನೂರು: ನಗರದ ನಗರಸಭೆ ಕಚೇರಿ ಮುಂಭಾಗದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ನಿಲ್ದಾಣದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡು ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಸಾರ್ವಜನಿಕರ ಹಾಗೂ ಪ್ರಯಾಣಿಕರು ನಿತ್ಯವೂ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು.ಹೀಗಾಗಿ ಪರಿಶೀಲನೆ ಮಾಲಾಗಿದೆ. ಇಲ್ಲಿರುವ ಹಳೇ ಕಟ್ಟಡಗಳನ್ನು ನೆಲಸಮ ಮಾಡಿ ನೂತನ ಬಸ್ನಿಲ್ದಾಣ ಮಾಡಬೇಕಾಗಿದೆ. ಇದಕ್ಕೆ ಬೇಕಾದಂತಹ ಅನುದಾನ ಸಂಬಂಧ ಸರ್ಕಾರದ ಜೊತೆ ಮಾತಾಡಿದ್ದೇನೆ. ಶೀಘ್ರವೇ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಿಸಿ ಸುಮಾರು ೫ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕವಾಗಿ ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಂಡಿ ದ್ದೇವೆ ಎಂದರು.
ಈಗಿನ ಖಾಸಗಿ ಬಸ್ ನಿಲ್ದಾಣದಲ್ಲಿ ಅಲ್ಪಜಾಗ ರಾಷ್ಟ್ರೀಯ ಹೆದ್ದಾರಿಗೆ ಹೋಗುತ್ತದೆ. ಹಾಗಾಗಿ ಈ ನಿಲ್ದಾಣದ ಪಕ್ಕದಲ್ಲಿ ಇರುವಂತಹ ಕಟ್ಟಡಗಳನ್ನು ತೆರವುಗೊಳಿಸುವ ಜತೆಗೆ¸ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟ ನಂತರ ಅದರ ಹಿಂಭಾಗದಲ್ಲಿ ಕಟ್ಟಡಗಳನ್ನು ಕಟ್ಟಲಾಗುತ್ತದೆ. ಇದಾದ ನಂತರ ಮುಂದಿನ ದಿನಗಳಲ್ಲಿ ಸರ್ಕಾರಿ ಬಸ್ ನಿಲ್ದಾಣವನ್ನು ಸಹ ಉನ್ನತ ರೀತಿಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಈ ವೇಳೆ ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷ ಫರೀದ್, ಆಯುಕ್ತ ಡಿ.ಎಂ. ಗೀತಾ, ನಗರಾಭಿವೃದ್ಧಿ ಇಲಾಖೆಯ ಅನ್ನಾ, ಸದಸ್ಯರಾದ ಮಂಜುಳಾ, ರಾಜಕುಮಾರ್, ನಗರಸಭೆ ಮಾಜಿ ಸದಸ್ಯ ಡಿ.ಜೆ. ಚಂದ್ರಮೋಹನ್, ಡಿಪೋ ವ್ಯವಸ್ಥಾಪಕ ರವಿ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.