Sunday, 15th December 2024

ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ನಿಧನ

ಬೆಂಗಳೂರು: ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ನಿಧನರಾಗಿದ್ದಾರೆ.

ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್‌, ಡಾ.ಮೋಹನ್‌ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

 

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಷಾ, ರಾಜ್‌ ನಾಥ್‌ ಸಿಂಗ್‌, ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಯಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ,  ನಿಧನರಾಗಿ ದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ತವರು ಜಿಲ್ಲೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಶ್ರೀನಿವಾಸ್‌ ಪ್ರಸಾದ್‌ ಪಾರ್ಥಿವ ಶರೀರವನ್ನು ಮಣಿಪಾಲ್‌ ಆಸ್ಪತ್ರೆಯಿಂದ ಮೈಸೂರಿನ ಜಯಲಕ್ಷೀಪುರಂನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.

ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮಾಜಿ ಶಾಸಕರಾದ ಜಿ.ಟಿ.ದೇವೇಗೌಡ, ಪುಟ್ಟರಂಗಶೆಟ್ಟಿ ಸೇರಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಇಲ್ಲಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ನಾಳೆ ಮೈಸೂರಿನಲ್ಲಿ ನಡೆಯಲಿದೆ ಎಂದು ಅವ ಪುತ್ರಿ ಪ್ರತಿಮಾ ಪ್ರಸಾದ್‌ ತಿಳಿಸಿದ್ದಾರೆ.