Monday, 25th November 2024

ಸೆ.26ರಂದು ರಾಷ್ಟ್ರಪತಿ ಮುರ್ಮು ಹುಬ್ಬಳ್ಳಿಗೆ ಭೇಟಿ

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಸೆ.26ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಮಾಹಿತಿ ನೀಡಿದ್ದಾರೆ.

ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿ ದ್ದಾರೆ. ಮೈಸೂರು ದಸರಾಗೆ ಆಗಮಿಸ ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಾಣಿಜ್ಯ ನಗರಿ‌ ಹುಬ್ಬಳ್ಳಿಗೂ ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ.‌ ಅವರಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 ಕೆ.ಜಿ ಬೆಳ್ಳಿಯ ಮೂರ್ತಿಯನ್ನು ನೀಡಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್‌ ಖಾನಾ ಮೈದಾನದಲ್ಲಿ‌ 70 ನಿಮಿಷಗಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಅಂದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಪೌರಸನ್ಮಾನ ಕಾರ್ಯಕ್ರಮದಲ್ಲಿ 5 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. 500 ಜನ ಪೌರ ಕಾರ್ಮಿಕರಿಗೆ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಧಾರವಾಡ ಐಐಟಿಗೆ ಭೇಟಿ ನೀಡಿ 400 ವಿದ್ಯಾರ್ಥಿಗಳ ಜೊತೆಗೆ ಅವರು ಸಂವಾದ ನಡೆಸಲಿದ್ದಾರೆ ಎಂದರು.

ಇನ್ನೂ, ರಾಷ್ಟ್ರಪತಿ ದ್ರೌಪದಿ ಮುರ್ಮು ಹುಬ್ಬಳ್ಳಿಗೆ ಭೇಟಿ ನೀಡಲಿರುವ ಮೂರನೇ ರಾಷ್ಟ್ರಪತಿಗಳಾಗಿದ್ದಾರೆ. ಈ ಹಿಂದೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಡಾ. ಎ.ಪಿ.ಜೆ ಅಬ್ದುಲ್‌ ಕಲಾಂ ಭೇಟಿ ನೀಡಿದ್ದರು.

2022ರ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿ ಆಗಲಿದ್ದಾರೆ.