ಬೆಂಗಳೂರು: ವಸತಿ ಶಾಲೆಯಲ್ಲಿನ ಬರಹಗಳಲ್ಲಿನ ವಿವಾದಕ್ಕೆ ಕಾರಣವಾಗಿದ್ದ ರಾಜ್ಯ ಸರ್ಕಾರ ಈಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಈಗ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ಆದೇಶ ಹೊರಡಿಸಿದ್ದು, ಆದೇಶದಲ್ಲಿ ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಅಲ್ಲ ಎನ್ನುವುದನ್ನು ಉಲ್ಲೇಖ ಮಾಡಿದೆ.
ಈ ಮೂಲಕ ರಾಜ್ಯ ಸರ್ಕಾರ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತ ಡಾಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ” ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ “(ಇ) ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಕನ್ನಡ ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.