ಮೈಸೂರು: ಬಕ್ರೀದ್ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ರಜೆ ದಿನ ಹಾಗೂ ಆಷಾಢ ಮಾಸದ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಹೆಚ್ಚು ಜನ ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ. ಈಗಾಗಲೇ ಜಿಲ್ಲಾಡಳಿತ ಆಷಾಢ ಮಾಸದ ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಪ್ರವೇಶ ನಿರ್ಬಂಧಿಸಿದೆ.
ಶುಕ್ರವಾರ, ಶನಿವಾರ, ಭಾನುವಾರದ ವಾರಾಂತ್ಯ ಹಾಗೂ ರಜಾ ದಿನಗಳಂದು ಪ್ರವೇಶ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದ ಎಲ್ಲ ಗೇಟ್‌ಗಳೂ ಕ್ಲೋಸ್ ಆಗಿವೆ. ಸಚಿವರು, ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.