ತುಮಕೂರು: ನಗರದ ಡಿ.ಎ.ಆರ್. ಮೈದಾನದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ , ಬಲೂನ್ ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ನಂತರ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ದಿನದ 24 ಗಂಟೆಯೂ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ನಿರಂತರವಾಗಿ ಪ್ರಯತ್ನ ಮಾಡಿದರೆ ಗೆಲುವು ಬಂದೇ ಬರುತ್ತದೆ. ಸೋತವರು ಕುಗ್ಗಬಾರದು, ಗೆದ್ದವರು ಹಿಗ್ಗಬಾರದು. ಸ್ನೇಹ ಮನೋಭಾವದಿಂದ ಕ್ರೀಡಾಕೂಟದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಉಪವಿಭಾಗದ ಪೊಲೀಸ್ ಕ್ರೀಡಾಪಟುಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಎಎಸ್ಪಿ ವಿ. ಮರಿಯಪ್ಪ ಸೇರಿದಂತೆ ಜಿಲ್ಲೆಯ ಎಲ್ಲ ಉಪವಿಭಾಗಾಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.