ಚಿಕ್ಕಬಳ್ಳಾಪುರ: ನಂದಿಗಿರಿಧಾಮಕ್ಕೆ ರೋಪ್ ವೇ ನಿರ್ಮಾಣಕ್ಕಿದ್ದ ತೊಡಕುಗಳು ಬಹುತೇಕ ನಿವಾರಣೆಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಶುರುವಾಗಲಿದೆ. ರೋಪ್ ವೇ ನಿರ್ಮಾಣ ಸಂಸ್ಥೆಗೆ ಜಮೀನು ಹಸ್ತಾಂತರ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದಕ್ಕೆ ಮುಕ್ತಿ ಸಿಗಲಿದೆ.
ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಂದಿಗಿರಿ ಧಾಮದಲ್ಲಿ ರೋಪ್ ವೇ ಕಾಮಗಾರಿ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಜತೆ ಸಭೆ ನಡೆಸಿ ತಾಂತ್ರಿಕ ಸಮಸ್ಯೆಗಳ ಬಗ್ಗೆ ಚರ್ಚಿಸ ಲಾಗಿತ್ತು. ಅಲ್ಲದೇ ಬೆಂಗಳೂರಿನಲ್ಲೂ ಅರಣ್ಯ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚಿಸಲಾಗಿತ್ತು.
ಇದೀಗ ರಾಜ್ಯ ಸರಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರು ಅಧಿಕಾರಿಗಳ ಸಭೆ ನಡೆಸಿ ರೋಪ್ ವೇ ಕಾಮಗಾರಿಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲು ಸೂಚನೆ ನೀಡಿದ್ದಾರೆ.
ನಂದಿಗಿರಿಧಾಮ ದಲ್ಲಿ 3 ಕಿ.ಮೀ. ಉದ್ದದ ರೋಪ್ ವೇಯನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಕಾಮಗಾರಿ ಆರಂಭಕ್ಕೂ ಮುನ್ನ ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆಯಿಂದ ಎನ್‌ಬಿಸಿ ಹಾಗೂ ರೋಪ್ ವೇ ಹಾದುಹೋಗುವ ಹಾದಿಯಲ್ಲಿ ಬರುವ ಖಾಸಗಿ ಜಮೀನುಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ನಡೆದಿತ್ತು. ಈಗ ಅದು ಅಂತಿಮ ಹಂತಕ್ಕೆ ಬಂದಿದ್ದು ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಶುರುವಾಗಲಿದೆ.