Sunday, 15th December 2024

ಗೂಂಡಾಗಿರಿ ವರ್ತನೆಗೆ ಹೋರಾಟದ ಮೂಲಕ ಉತ್ತರ: ಸಿದ್ದರಾಮಯ್ಯ ಎಚ್ಚರಿಕೆ

muda scam cm siddaramaiah

ಮಡಿಕೇರಿ: ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದವರು ತೋರುತ್ತಿರುವ ಗೂಂಡಾಗಿರಿ ವರ್ತನೆಗೆ ನಾವು ಹೋರಾಟದ ಮೂಲಕ ಉತ್ತರ ನೀಡುತ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಘಟನೆ ಉಲ್ಲೇಖಿಸಿ ಕರ್ನಾಟಕ ದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಸಂಘ-ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ದೂಷಿಸಿದೆ.

ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿರುವ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಮನು, ಕೃಷ್ಣಪ್ಪ, ಮಂಜುನಾಥ, ನಿತ್ಯಾನಂದ, ಪ್ರವೀಣ, ಗೌತಮ್, ಭಾಸ್ಕರ ನಾಯ್ಕ್, ಮಣಿಕಂಠ ಲಕ್ಷ್ಮೀ ನಾರಾಯಣ ಎಂಬವರನ್ನು ಕುಶಾಲನಗರ ಠಾಣಾ ಪೊಲೀಸರು ಬಂಧಿಸಿದ್ದರು.