Saturday, 26th October 2024

ಜೂನ್ 1ರಂದು “ಸ್ಪಂದನ ಕಲಬುರಗಿ” ಕಾರ್ಯಕ್ರಮ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಿ.ಸಿ. ಯಶವಂತ ವಿ. ಗುರುಕರ್ ಮನವಿ

ಕಲಬುರಗಿ: ಸಾರ್ವಜನಿಕರ ಕುಂದುಕೊರತೆಗಳನ್ನು ವಿವಿಧ ಇಲಾಖೆಗಳ ಅಧಿಕಾರಿಗಳ ಸಮಕ್ಷಮದಲ್ಲಿ ಖುದ್ದಾಗಿ ಆಲಿಸಿ ಪರಿಹಾರ ನೀಡಲು “ಸ್ಪಂದನ ಕಲಬು ರಗಿ” ಎಂಬ ವಿನೂತನ ಕಾರ್ಯಕ್ರಮ ಜೂನ್ 1 ದಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಮಂಗಳವಾರ ಈ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿದರು.

ಆಡಳಿತಕ್ಕೆ ವೇಗ ನೀಡಲು ಮತ್ತು ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೆ ಸ್ಪಂದಿಸಲು ಸ್ಪಂದನ ಕಲಬುರಗಿ ಎಂಬ ಪ್ರಯೋಗಾತ್ಮಕ ಕಾರ್ಯಕ್ರಮ ಜಿಲ್ಲಾಡಳಿತ ಹಮ್ಮಿಕೊಂಡಿದೆ. ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ವರೆಗೆ ಈ ಕಾರ್ಯಕ್ರಮ ಜರುಗಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು ಅಥವಾ ಸರ್ಕಾರಿ ಕಚೇರಿಯಲ್ಲಿ ಅರ್ಜಿ ವಿಲೇವಾರಿಯಲ್ಲಿ ವಿಳಂಬ ಮಾಡುತ್ತಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಸಾರ್ವಜನಿಕರಿಂದ ಅರ್ಜಿ ಸ್ವೀಕಾರಕ್ಕೆ ಇಲಾಖಾವಾರು 24 ಸ್ಟಾಲ್‍ಗಳನ್ನು ತೆರೆಯಬೇಕು, ವೇದಿಕೆ ನಿರ್ಮಾಣ, ಹೂವಿನ ಆಲಂಕಾರ ಮಾಡುವಂತೆ ಸಂಬಂಧಿ ಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರ್ಜಿದಾರರು ಸ್ಟಾಲ್‍ನಲ್ಲಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬಹು ದಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಕಂದಾಯ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ಆರೋಗ್ಯ, ಭೂ ದಾಖಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ ಹೀಗೆ 24 ಪ್ರಮುಖ ಇಲಾಖೆಗಳು ಸಿಬ್ಬಂದಿಗಳು ಅರ್ಜಿ ಸ್ವೀಕರಿಸಲಿದ್ದಾರೆ. ಜೊತೆಗೆ ಆಯಾ ಇಲಾಖೆಯ ಜನಪರ ಯೋಜನೆಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಲ್ಲಿಸಲಾಗುವ ಅರ್ಜಿಗಳ ವಿಲೇವಾರಿಗೆ ದಾಖಲೆಗಳ ನಿರ್ವಹಣೆ ಮಾಡುವಂತೆ ಸಹ ಸಂಬಂಧಿಸಿದ ಅಧಿಕಾರಿಗಳಿಗೆ ಡಿ.ಸಿ. ಯಶವಂತ ವಿ. ಗುರುಕರ್ ಸೂಚಿಸಿದ್ದಾರೆ.

ಸೌಲಭ್ಯ ವಿತರಣೆ: ಸರ್ಕಾರದ ವಿವಿಧ ಇಲಾಖೆಗಳ ಮಹತ್ವಕಾಂಕ್ಷೆ (ಫ್ಲ್ಯಾಗ್‍ಶಿಪ್) ಯೋಜನೆಗಳಲ್ಲಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಜಿಲ್ಲೆಯ ಜನಪ್ರತಿನಿಧಿಗಳಿಂದ ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ವಣಿಕ್ಯಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ನಂತರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಧಿಕಾರಿಗಳೊಂದಿಗೆ ಕಾರ್ಯಕ್ರಮ ನಡೆಯುವ ಡಿ.ಸಿ. ಕಚೇರಿ ಆವರಣವನ್ನು ಪರಿಶೀಲಿಸಿದರು.