Thursday, 25th April 2024

ಹರ್ಷ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಘಟನೆ ಹಿಂಸಾಚಾರಕ್ಕೆ ತಿರುಗಿದೆ.

ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಹೊಟೇಲ್, ಕಟ್ಟಡಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಕಿಡಿಗೇಡಿಗಳು ಹಲವು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ.

ಪರಿಸ್ಥಿತಿ ನಿಭಾಯಿಸಲು ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ನಿವಾಸವಿರುವ ಬಸವನ ಬೀದಿಗೆ ಮೃತ ದೇಹವನ್ನು ಮೆರವಣಿಗೆ ಮೂಲಕ ಕೊಂಡೊಯ್ಯುವಾಗ ಬಸ್ ನಿಲ್ದಾಣದ ಬಳಿ ಅಶೋಕ ವೃತ್ತದ ಹೊಟೇಲ್ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಆಜಾದ್ ಗಲ್ಲಿಯಲ್ಲಿ ಎರಡು ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ಬೈಕ್, ತಳ್ಳುವ ಗಾಡಿ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ. ಕೊಲೆ ನಡೆದ ಸೀಗೆಹಟ್ಟಿ ಭಾಗದಲ್ಲೂ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಯಾವುದೇ ರೀತಿಯ ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಆರ್‍ಎಎಫ್, ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಥಳಕ್ಕೆ ಎಸ್‍ಪಿ ಲಕ್ಷ್ಮಿ ಪ್ರಸಾದ್ ಮತ್ತು ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

error: Content is protected !!