Sunday, 15th December 2024

ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಿದ್ದಾರೆ.

ಜ.22ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುವ ಸಂದರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು. ಇದಕ್ಕೆ ಅನುಸರಿಸಬೇಕಿರುವ ಕ್ರಮಗಳ ಕುರಿತು ಸುತ್ತೋಲೆಯಲ್ಲಿ ಮಾಹಿತಿ ನೀಡಲಾಗುವುದು.

ಶ್ರೀ ರಾಮನ ದೇವಾಲಯ ಮಾತ್ರವಲ್ಲದೆ, ಎಲ್ಲಾ ದೇವಾಲಯಗಳಲ್ಲಿಯೂ ವಿಶೇಷ ಪೂಜೆ ಸಲ್ಲಿಸಲು ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.