ತುಮಕೂರು : ಮಾದಕ ವಸ್ತು, ಡ್ರಗ್ಸ್ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸ ಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳು ಮಾದಕ ವಸ್ತುಗಳ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರಲ್ಲದೆ, ಸಮಿತಿಯನ್ನು ಮತ್ತಷ್ಟು ಬಲಪಡಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಮೆಡಿಕಲ್ ಮತ್ತು ಇಂಜಿನಿಯ ರಿಂಗ್ ಕಾಲೇಜುಗಳ ಪ್ರಾಂಶುಪಾಲರು, ವಿಶ್ವವಿದ್ಯಾನಿಲಯದ ನಿಬಂಧಕರು, ಮತ್ತು ಡೀನ್‌ಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದರು.
ಶಿಕ್ಷಣ ಸಂಸ್ಥೆ ವಸತಿ ನಿಲಯಗಳಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳನ್ನು ನಿಷೇಧಿಸಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಸತಿ ನಿಲಯಗಳ ಪಾಲಕರು ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ಅವರ ಕೋಣೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮಾದಕ ವಸ್ತುಗಳ ಬಳಸುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ತಂಬಾಕು ಸೇವನೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಾಗಾರವನ್ನು ಈಗಾಗಲೇ ನಡೆಸಲಾಗು ತ್ತಿದ್ದು, ಇನ್ನು ಮುಂದೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಮತ್ತು ಕಾನೂನಿನ ಬಗ್ಗೆಯೂ ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಮಾತನಾಡಿ, ಶಾಲಾ ಕಾಲೇಜುಗಳಲ್ಲದೆ ಹೋಟೆಲ್ ಹಾಗೂ ಪಿಜಿಗಳಲ್ಲೂ ಸಹ ಮಾದಕ ವಸ್ತುಗಳ ಬಳಕೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೆಡಿಕಲ್ ಸ್ಟೋರ್‌ಗಳಲ್ಲಿ ದೊರೆಯುವ ಔಷಧಿಗಳನ್ನು ಮಾದಕ ವಸ್ತುಗಳಾಗಿ ಉಪಯೋಗಿಸುವ ವ್ಯಸನಿಗಳಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.