ತುಮಕೂರು: ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವ ಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಟೌನ್‌ಹಾಲ್ ವೃತ್ತದಿಂದ ಹಮ್ಮಿ ಕೊಂಡಿದ್ದ ಈ ಜಾಗೃತಿ ಜಾಥಾಗೆ ಕಾನೂನು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಗಳೂ ಆದ ನ್ಯಾ. ನೂರುನ್ನೀಸ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ನ್ಯಾಯಾಧೀಶರಾದ ನೂರುನ್ನೀಸ, ವಿಶ್ವ ತಂಬಾಕು ದಿನಾಚರಣೆ ಯಿಂದ ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ ತುತ್ತಾಗಿ ತಮ್ಮ ಜೀವನವನ್ನೆ ಹಾಳು ಮಾಡಿಕೊಂಡಿದ್ದಾರೆ. ಹಾಗೆಯೇ ಮಹಿಳೆಯರು ಸಹ ತಂಬಾಕಿನಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದರು.
ಡಿಹೆಚ್‌ಓ ಡಾ. ಮಂಜುನಾಥ್ ಮಾತನಾಡಿ, ಪ್ರತಿ ವರ್ಷ 5 ಲಕ್ಷ ಜನ ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಾರೆ. ಯಾವುದೇ ಒಬ್ಬ ವ್ಯಕ್ತಿ ಮರಣ ಹೊಂದಿದಾಗ ಮನೆಯ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗುತ್ತದೆ. ತುಂಬಾ ಕಷ್ಟಕರ ವಾತಾವರಣ ನಿರ್ಮಾಣವಾಗುತ್ತದೆ. ಹಾಗಾಗಿ ಜನರಲ್ಲಿ ಈ ಕುರಿತು ಅರಿವು ಮೂಡಿಸುವ ಸಲುವಾಗಿ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳಿಗೆ, ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕರು ಮತ್ತು ನಿರ್ವಾಹಕರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದ್ದು, ಬಿ.ಪಿ., ಮಧುಮೇಹ, ಕಣ್ಣು ತಪಾಸಣೆ ನಡೆಸಲಾಗುತ್ತಿದೆ ಎಂದರು.
ಟೌನ್‌ಹಾಲ್ ವೃತ್ತದಿಂದ ಹೊರಟ ಜಾಥಾವು ಟೌನ್‌ಹಾಲ್ ಮುಖೇನ ಅಶೋಕ ರಸ್ತೆಯಲ್ಲಿ ಸಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ತಲುಪಿತು.
ಜಾಥಾದಲ್ಲಿ ಡಿಡಿಪಿಐ ಸಿ. ನಂಜಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್, ಜಿಲ್ಲಾ ಸಲಹೆಗಾರರಾದ ಎಂ.ಆರ್. ರವಿಪ್ರಕಾಶ್, ಹರೀಶ್, ರುಕ್ಮಿಣಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.