ಮೈಸೂರು/ಮಂಡ್ಯ: ಮಂಡ್ಯ ಹಾಗೂ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ವೃದ್ಧೆಯರಿಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ವೃದ್ಧೆ ಮೇಲೆ ಹರಿದಿದೆ.
ಪರಿಣಾಮ ವೃದ್ಧೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಾರ್ವತಮ್ಮ (75) ಮೃತ ದುರ್ದೈವಿ.
ಪಾರ್ವತಮ್ಮ ನಂಜನಗೂಡಿನ ಮೇದಾರ ಬೀದಿ ನಿವಾಸಿ. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದಾಗ, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ವೃದ್ಧೆ ಮೇಲೆ ಹರಿದಿದೆ. ತೀವ್ರ ರಕ್ತಸ್ರಾವಗೊಂಡ ಪಾರ್ವತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
ಮಂಡ್ಯ ತಾಲೂಕಿನ ಹನಕೆರೆ ಬಳಿ ರೈಲಿಗೆ ಸಿಲುಕಿ ಹೊನ್ನಗಳ್ಳಿ ಮಠದ ನಿಂಗಮ್ಮ (70) ದಾರುಣವಾಗಿ ಮೃತಪಟ್ಟಿದ್ದಾರೆ
ಮಂಡ್ಯಕ್ಕೆ ತೆರಳುವ ಮಾರ್ಗದಲ್ಲಿ ಹನಕೆರೆ ಬಳಿ ರೈಲ್ವೆ ಗೇಟ್ ಹಾಕಲಾಗಿತ್ತು. ರೈಲ್ವೆ ಗೇಟ್ ಬಳಿ ದಾಟುವ ವೇಳೆ ತಿರುಪತಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ನಿಂಗಮ್ಮ ಮೃತಪಟ್ಟಿದ್ದಾರೆ. ರೈಲು ವೇಗವಾಗಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ 100 ಮೀಟರ್ ದೂರ ವೃದ್ಧೆಯ ದೇಹ ಎಸೆಯಲ್ಪಟ್ಟಿದೆ. ತಲೆಗೆ ಗಂಭೀರ ಪೆಟ್ಟಾಗಿದ್ದು ನಿಂಗಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಮಂಡ್ಯ ರೈಲ್ವೇ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.