ತುಮಕೂರು: ಜಿಲ್ಲೆಯಲ್ಲಿ ಮಂಗಳವಾರದಿಂದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೋಮಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಫಲಾನುಭವಿಗಳಿಗೆ ಮಾಹೆಯಾನ 3 ಸಾವಿರ. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1500 ರು.ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆಯನ್ನು ಜಮೆ ಮಾಡಲಾಗುವುದು ಎಂದರು.
ಈಗಾಗಲೇ ಜಾರಿಯಲ್ಲಿರುವ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆಯಲ್ಲಿ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ಮಾಧ್ಯಮ ಪ್ರತಿನಿಧಿಗಳು ತಂದಾಗ, ಯೋಜನೆ ಜಾರಿಗೊಳಿಸಿದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಅಂದಾಜು ಮಾಡಿರಲಿಲ್ಲ. ಆದ ಕಾರಣ ಸಮಸ್ಯೆಯುಂಟಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ ಸೇರಿದಂತೆ ಹೊಸದಾಗಿ ಸುಮಾರು ೫,೦೦೦ ಬಸ್‌ಗಳನ್ನು ಖರೀದಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಆದ್ಯತೆ ಮೇಲೆ ಹೆಚ್ಚುವರಿ ಬಸ್‌ಗಳನ್ನು ಸಂಚಾರಕ್ಕೆ ಬಿಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾಂತ್ರಿಕ ಸಮಸ್ಯೆಯಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿಲ್ಲ. ಹೊಸ ಯೋಜನೆಯಾದ್ದರಿಂದ ತಾಂತ್ರಿಕ ಸಮಸ್ಯೆಗಳು ಉಂಟಾಗುವುದು ಸಹಜ. ಒಂದೆರಡು ತಿಂಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲಾಗುವುದು. ಬಾಕಿ ಹಣವನ್ನೂ ಸಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಯಾವುದೇ ಕಾರಣಕ್ಕೂ ೫ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ. ಸಾರ್ವಜನಿಕರು ಆತಂಕ ಪಡಬಾರದು. ಲೋಕಸಭೆ ಚುನಾವಣೆ ನಂತರವೂ ಈ ಯೋಜನೆಗಳು ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.
ವಿದ್ಯಾರ್ಥಿಗಳು ಭವಿಷ್ಯದ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಎಲ್ಲಾ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬರುವ ೨೦೨೪ರ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಆಯ-ವ್ಯಯ ಮಂಡನೆಯಾಗುವ ನಿರೀಕ್ಷೆಯಿದ್ದು, ಆಯ-ವ್ಯಯದ ನಂತರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ಕೋವಿಡ್ ಮಾರ್ಗ ಸೂಚಿಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಡಾ. ರವಿ ಅವರ ಅಧ್ಯಕ್ಷತೆಯಲ್ಲಿ ವೈದ್ಯರುಗಳನ್ನೊಳಗೊಂಡ ತಾಂತ್ರಿಕ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಸಲಹೆಯಂತೆ ಕೋವಿಡ್ ಮಾರ್ಗ ಸೂಚಿಗಳನ್ನು ಅನುಸರಿಸುವಂತೆ ಮಾರ್ಗದರ್ಶನ ನೀಡಲಾಗುವುದು ಎಂದರಲ್ಲದೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್ ವೈರಾಣುವಿನ ಹೊಸ ಉಪತಳಿ ಜೆಎನ್.೧ ಸೋಂಕಿನ ನಿಯಂತ್ರಣಕ್ಕೆ ಸರಕಾರ ಸಿದ್ಧವಿದೆ. ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.