ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SSLC Exam: ಮಾ.21ರಿಂದ SSLC ಪರೀಕ್ಷೆ; ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ತಿಳಿದಿರಿ

SSLC Exam: ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಎಲ್ಲಾ 2818 ಕೇಂದ್ರಗಳಲ್ಲಿ ವೆಬ್‌ಕ್ಯಾಸ್ಟಿಂಗ್‌ ಅಳವಡಿಸಲಾಗಿದ್ದು, ಜೊತೆಗೆ ಇಡೀ ಕೇಂದ್ರದಲ್ಲಿ ಸಿಸಿಟಿವಿ ಹಾಕಲಾಗಿದೆ. ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳು ಪರದೆ ಮೇಲೆ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಆಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಅಕ್ರಮಕ್ಕೆ ಬ್ರೇಕ್‌ ಹಾಕಲು ಸರ್ಕಾರ ಸಜ್ಜಾಗಿದೆ.

ಮಾ.21ರಿಂದ SSLC ಪರೀಕ್ಷೆ; ವಿದ್ಯಾರ್ಥಿಗಳೇ ಈ ನಿಯಮಗಳ ಬಗ್ಗೆ ತಿಳಿದಿರಿ

Profile Rakshita Karkera Mar 16, 2025 8:37 AM

ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ(SSLC Exam) ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಸರ್ಕಾರ ಕಠಿಣ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಎಲ್ಲಾ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದ್ದು, ಜೊತೆಗೆ ಇಡೀ ಕೇಂದ್ರದಲ್ಲಿ ಸಿಸಿಟಿವಿ ಹಾಕಲಾಗಿದೆ. ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳು ಪರದೆ ಮೇಲೆ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ವಿದ್ಯಾರ್ಥಿಗಳೇ ಈ ನಿಯಮ ತಿಳಿದಿರಲಿ

  • ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಸ್‌ ಮಾತ್ರ ಬಳಸಲು ಅವಕಾಶ
  • ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
  • ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
  • ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
  • ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
  • ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
  • ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ:SSLC Exam Preparation Tips: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಈ ಟಿಪ್ಸ್‌ ಫಾಲೋ ಮಾಡಿ

ಸೂಚನೆಗಳು:

  • 05.04.2025 (2) 28… (56, 57, 58 & 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
  • ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.
  • ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.
  • ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು.
  • ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ರವರೆಗೆ ಅವಧಿ ನಿಗದಿಪಡಿಸಿದೆ.
  • ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
  • ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.00 ರಿಂದ 12.15ರವರೆಗೆ ನಡೆಯಲಿದೆ.
  • ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.