Karnataka By-Election Results 2026: ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು, ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಮುನ್ನಡೆ
Karnataka Bypoll Results: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಸ್ಪರ್ಧಿಸಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಸ್ಪರ್ಧಿಸಿದ್ದಾರೆ. ಇವರ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.
ದಾವಣಗೆರೆ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್ ಮೇಟಿ. -
ದಾವಣಗೆರೆ/ ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 9ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 2 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಮರ್ಥ್ 27,878 ಮತ ಮತ್ತು ಶ್ರೀನಿವಾಸ ದಾಸಕರಿಯಪ್ಪ 25, 878 ಮತ ಪಡೆದಿದ್ದಾರೆ.
ಇನ್ನು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ (60,977 ಮತ), ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ (51,422 ಮತ) ವಿರುದ್ಧ 9,555 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ನಡೆಯುತ್ತಿದೆ. ಇದಕ್ಕಾಗಿ 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. 23 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಅಂಚೆ ಮತ ಪತ್ರಗಳ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆಯನ್ನು ಮಾಡಲಾಗಿದೆ.
ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆ ಕಾರ್ಯವು ದಾವಣಗೆರೆ ನಗರದ ಡಿಆರ್‌ಆರ್ ಕಾಲೇಜಿನಲ್ಲಿ ನಡೆಯುತ್ತಿದೆ. ಇದಕ್ಕಾಗಿ ಒಟ್ಟು 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 21 ಸುತ್ತುಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ. ಈ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.