Friday, 3rd February 2023

ಲಾಕ್ ಡೌನ್ ವಿಸ್ತರಿಸಿ, ತಲಾ 10 ಸಾವಿರ ರೂ. ಪರಿಹಾರ ಪ್ಯಾಕೇಜ್ ಘೋಷಿಸಿ: ಹೆಚ್ಡಿಕೆ ಒತ್ತಾಯ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮತ್ತು ಸಂಕಷ್ಟದಲ್ಲಿರುವ ಜನರಿಗೆ 10 ಸಾವಿರ ಪರಿಹಾರ ಪ್ಯಾಕೇಜ್ ಘೋಷಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರೋನಾ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿ ಯಿಂದ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಹೇಳಿದ್ದಾರೆ.

ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಕ್ಕೆ ತೆರಿಗೆ ಹೆಚ್ಚು ಬಂದಿದೆ. ಅಬಕಾರಿ ಇಲಾಖೆಯೊಂದರಲ್ಲೇ ಶೇ.150ರಷ್ಟು ಕಳೆದ ವರ್ಷಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ಸರ್ಕಾರ ಈ ಬಾರಿ ಘೋಷಿಸಿರುವ 1,250 ಕೋಟಿ ರೂಪಾಯಿಗಳ ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದು ತಿಳಿಸಿದ್ದಾರೆ.

ತಲಾ 10 ಸಾವಿರ ರೂಪಾಯಿ ಏಕರೂಪ ಪರಿಹಾರ ಘೋಷಣೆ ಮಾಡಿದರೆ, 10 ಸಾವಿರ ಕೋಟಿ ರೂಪಾಯಿಗಳ ಹೊರೆಯನ್ನು ಭರಿಸಬೇಕಾಗುತ್ತದೆ. ವರ್ಷಕ್ಕೆ ಲಕ್ಷಾಂತರ ಕೋಟಿಗಳ ಬಜೆಟ್ ಘೋಷಣೆ ಮಾಡುವ ರಾಜ್ಯ ಸರ್ಕಾರಕ್ಕೆ ಇದೇನು ಹೊರೆಯಾಗದು ಎಂದು ಸಲಹೆ ನೀಡಿದ್ದಾರೆ.

ಅನಗತ್ಯ ಕಾಮಗಾರಿಗಳಿಗೆ ಮಂಜೂರು ಮಾಡುವುದನ್ನು ತಕ್ಷಣಕ್ಕೆ ನಿಲ್ಲಿಸುವುದು ಒಳಿತು. ತೋರ್ಪಡಿಕೆಗೆ ಪರಿಹಾರ ಘೋಷಣೆ ಮಾಡುವುದನ್ನು ಬಿಟ್ಟು, ಧರ್ಮ ಸಂಕಟಕ್ಕೆ ಸಿಲುಕಿರುವ ಜನತೆಗೆ ಬದ್ಧತೆಯ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುವ ಪ್ಯಾಕೇಜ್ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.

error: Content is protected !!