ಇಸ್ಲಾಮಾಬಾದ್: ಪಾಕಿಸ್ತಾನದ ಕೊಹಾಟ್‌ನಲ್ಲಿರುವ ಮಸೀದಿಯ ಬಳಿ ಶುಕ್ರವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಈ ವರೆಗೆ 14 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. (Blast In Pakistan) ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದು, ಗಾಯಾಳುಗಳನ್ನು ಹತ್ತಿರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಈ ವರೆಗೆ 14 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. 50 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆಂದು ರಕ್ಷಣಾ ಪಡೆಗಳು ತಿಳಿಸಿವೆ. ಸ್ಫೋಟದ ನಂತರ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಪೊಲೀಸರು ಪೀಡಿತ ಪ್ರದೇಶದ ಸುತ್ತಲೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಸದ್ಯ ಕೊಹತ್ ಹಂಗು ರಸ್ತೆಯನ್ನು ಬಂದ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಡಿಯೋ ನೋಡಿ
ಸದ್ಯ ತನಿಖೆ ಪ್ರಗತಿಯಲ್ಲಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ದಾಳಿಕೋರನೊಬ್ಬ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಮಸೀದಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ . ಶುಕ್ರವಾರ ಮಸೀದಿಯಲ್ಲಿ ಭಾರೀ ಜನ ಸೇರಿದ್ದರು. ಇದೇ ವೇಳೆ ದಾಳಿ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ದೃಶ್ಯಗಳಲ್ಲಿ ಮಸೀದಿಯ ಮೇಲ್ಛಾವಣಿ ಕುಸಿದಿರುವುದನ್ನು ತೋರಿಸಲಾಗಿದೆ. ದಾಳಿಯ ಹೊಣೆಯನ್ನು ಯಾವುದೇ ಗುಂಪು ತಕ್ಷಣಕ್ಕೆ ಹೊತ್ತುಕೊಂಡಿಲ್ಲ.
ಬ್ರಿಕ್ಸ್ ಶೃಂಗಸಭೆಯ ನಂತರ ವಿಶ್ವ ನಾಯಕರು ಅನಾರೋಗ್ಯಕ್ಕೆ ಒಳಗಾಗಿದ್ದಾರೆಯೇ? ಸುಳ್ಳು ಸುದ್ದಿ ಹಬ್ಬಿಸಿದ ಪಾಕಿಸ್ತಾನ
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ದಾಳಿಯನ್ನು ಖಂಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ ಅವರು, ಸಂತ್ರಸ್ತರಿಗೆ ನೆರವು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಾಯುವ್ಯ ಹಂಗು ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ರಸ್ತೆಬದಿಯ ಬಾಂಬ್ ದಾಳಿ ನಡೆಸಿ ಆರು ಸೈನಿಕರು ಸಾವನ್ನಪ್ಪಿದ ಒಂದು ದಿನದ ನಂತರ ಈ ದಾಳಿ ನಡೆದಿದೆ. ಈ ದಾಳಿಯ ಬೆನ್ನಲ್ಲೇ ಭದ್ರತಾ ಪಡೆಗಳು ಹಂಗು ಮತ್ತು ಉತ್ತರ ವಜೀರಿಸ್ತಾನ್ ಜಿಲ್ಲೆಗಳಲ್ಲಿ ನಡೆಸಿದ ಜಂಟಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ 10 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪಾಕ್ ಸೇನೆ ತಿಳಿಸಿತ್ತು.