ಮನಿಲಾ: ಮಧ್ಯ ಫಿಲಿಪ್ಪಿನ್ಸ್ನ ಆಂಟಿಕ್ ಪ್ರಾಂತ್ಯದಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ದೊಡ್ಡ ಬಂಡೆಯಿಂದ ಉರುಳಿ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ.
53 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಇಲೋಯಿಲೋ ನಗರದಿಂದ ಪಶ್ಚಿಮಕ್ಕೆ ಆಂಟಿಕ್ ಪ್ರಾಂತ್ಯದ ಸ್ಯಾನ್ ಜೋಸ್ ಡಿ ಬ್ಯೂನಾವಿಸ್ಟಾಗೆ ತೆರಳುತ್ತಿದ್ದಾಗ ಘಟನೆ ಜರುಗಿದೆ. ಇದಕ್ಕೂ ಮೊದಲು ಕಾಂಕ್ರೀಟ್ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಬಂಡೆ ಮೇಲಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಕೂಡ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಕೀನ್ಯಾದ ಓರ್ವ ಪುರುಷ ಪ್ರಯಾಣಿಕ ಸೇರಿದಂತೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಇಲೋಯಿಲೋ ನಗರದ ಆಸ್ಪತ್ರೆಗೆ ಕರೆದೊಯ್ಯ ಲಾಗಿದೆ. ಸ್ಥಳದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತರ ಶವಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ಯಾಬ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಗಂದರ್ ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ.
ಝೋಜಿಲ್ಲಾ ಪಾಸ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಬ್ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.