Thursday, 2nd February 2023

ಹೆಚ್.ಡಿ.ಕೆ ಮಾಧ್ಯಮ ಸಲಹೆಗಾರ ಕೆ.ಸಿ.ಸದಾನಂದ ಹೃದಯಾಘಾತದಿಂದ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸೋಮವಾರ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತಾದರೂ ರಾತ್ರಿ 12 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಹೆಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಕೆ.ಸಿ.ಸದಾನಂದ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

***

ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು. ಅವರ ಕುಟುಂಬದ ನೋವು ನನ್ನದೂ ಕೂಡ. ನೀವು ನಿರ್ಗಮಿಸಿದರೂ ‘ಸದಾ’ ನೆನಪಲ್ಲಿರುತ್ತೀರಿ.
-ಹೆಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

error: Content is protected !!