Friday, 2nd December 2022

ನಗರದಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದರು.

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಅ.15ರ ತನಕ ಮಳೆಯಾಗಲಿದೆ ಎಂಬ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು

ಸೋಮವಾರ ಮಧ್ಯಾಹ್ನ 12 ಗಂಟೆ ಬಳಿಕ ನಗರದಲ್ಲಿ ಮಳೆಯಾಗಿತ್ತು. ಬಳಿಕ ಮೋಡ ಕವಿದ ವಾತಾವರಣವಿತ್ತು. ಸಂಜೆ 6 ಗಂಟೆಯ ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಭಾರೀ ಮಳೆಯಾಗಿದೆ.

ಹೆಬ್ಬಾಳ, ಮಲ್ಲೇಶ್ವರ, ರಾಜಾಜಿನಗರ, ಮೆಜೆಸ್ಟಿಕ್, ಕೆ. ಆರ್. ಮಾರುಕಟ್ಟೆ, ಜಯನಗರ, ಹನುಮಂತನನಗರ, ವಿದ್ಯಾಪೀಠ ವೃತ್ತ, ಆರ್. ಆರ್. ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ. ಸಂಜೆ ಸುರಿದ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದರು. ಹಲವಾರು ಕಡೆ ಮನೆಗಳಿಗೆ ನೀರು ನುಗ್ಗಿದೆ ಎಂದು ಶಂಕಿಸಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಕ್ಯಾಬ್‌ಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದಸರಾ ಸಂದರ್ಭದಲ್ಲಿ ಊರಿಗೆ ಹೊರಟ ಜನರು ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿ ಮಳೆಯಿಂದ ಉಂಟಾದ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು.