ಬೆಳಗಾವಿ: ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BIMS Hospital) ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಶನಿವಾರ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಅವರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ.95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Cauvery Aarti: ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿ.ಕೆ. ಶಿವಕುಮಾರ್
ಈ ವೇಳೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ: ಸಿಎಂ
ಬೆಳಗಾವಿ: ನಮ್ಮ ಸರ್ಕಾರವು ನುಡಿದಂತೆ ನಡೆದು, ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.
ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದು ತೋರಿಸಿದೆ.

ಈ ಸುದ್ದಿಯನ್ನೂ ಓದಿ | Caste Census: ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ, ತಪ್ಪದೇ ಮಾಹಿತಿ ನೀಡಿ
ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ, ಇಂದು ನಾನೆ ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ನಾವು ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಿದ್ದೇವೆ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಿಲ್ಲ.
ಮುಖ್ಯಮಂತ್ರಿ ಹುದ್ದೆ ವಿಷಯ ನಮ್ಮ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ. ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಂಡರೆ ಸಾಕು ಎಂದು ಸಿಎಂ ಹೇಳಿದರು.