ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಬ್ಬು ಬೆಳೆಗಾರರ‌ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನಾಳೆಯಿಂದ ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

Sugarcane Farmers Protest: ಕಬ್ಬಿನ ಎಂಎಸ್‌ಪಿ ಏರಿಕೆ, ಸಕ್ಕರೆ ಕಾರ್ಖಾನೆಗಳ ಆರಂಭ ಹಾಗೂ ರೈತರ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ತಿಳಿಸಿದ್ದಾರೆ.

ಕಬ್ಬು ಬೆಳೆಗಾರರ‌ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನಾಳೆಯಿಂದ ಪ್ರತಿಭಟನೆ

-

Profile
Siddalinga Swamy Oct 12, 2026 11:07 PM

ಬೆಳಗಾವಿ, ಅ.12: ಕಬ್ಬು ಬೆಳೆಗಾರರ‌ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಸಚಿವರ ಜತೆ ರಾಜ್ಯ ರೈತರು ನಡೆಸಿರುವ ಸಭೆ ವಿಫಲವಾಗಿದ್ದು, ನಾಳೆಯಿಂದ (ಅ.13ರಂದು) ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆಗೆ ರಾಜ್ಯ ರೈತ ಸಂಘಟನೆ ಕರೆ ನೀಡಿದೆ. ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಳ, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ 60 ಕ್ಕೆ ಏರಿಕೆ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಕೇಂದ್ರ ಸರ್ಕಾರ ಸಂಪೂರ್ಣ ಎಥೆನಾಲ್ ಖರೀದಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಕರ್ನಾಟಕದ 35 ರೈತ ಮುಖಂಡರ ನಿಯೋಗ ಚರ್ಚೆ ನಡೆಸಿರುವ ಚರ್ಚೆ ಫಲಪ್ರದವಾಗಿಲ್ಲ.

ಕೇಂದ್ರ ಸಚಿವರ ಜತೆಗಿನ ಸಭೆ ವಿಫಲವಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೈತ ಸಂಘಟನೆ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ, ಸಚಿವ ಪ್ರಹ್ಲಾದ್‌ ಜೋಶಿ ಮಾತುಕತೆ ಹೆಸರಿನಲ್ಲಿ ರೈತರನ್ನು ದೆಹಲಿಗೆ ಕರೆದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಎಂಎಸ್‌ಪಿ ಹೆಚ್ಚಳಕ್ಕೆ ಆಸಕ್ತಿ ತೋರಿಲ್ಲ. ರೈತರ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮಂಗಳವಾರದಿಂದ ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದರು.

ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ರೈತರ ಸಂಕಷ್ಟ ಆಲಿಸದ ಕೇಂದ್ರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ದೇಶದ ಐದು ಕೋಟಿ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸಚಿವ ಪ್ರಹ್ಲಾದ್‌ ಜೋಶಿ ಸ್ಪಂದಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕಳೆದ ಎರಡು ತಿಂಗಳಿಂದ ಕಬ್ಬಿನ ಎಂಎಸ್‌ಪಿ ಏರಿಕೆಗೆ ಒತ್ತಾಯಿಸುತ್ತಿದ್ದೇವೆ. ಬೆಲೆ ಏರಿಕೆ ನಿರ್ಧಾರಕ್ಕೆ ಇನ್ನೂ ಒಂದು ತಿಂಗಳು ಬೇಕು ಎಂದು ಹೇಳಲಾಗುತ್ತಿದೆ. ಆದರೆ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವಾಗ ಯಾರ ಅಭಿಪ್ರಾಯ ಪಡೆಯಲಾಗಿತ್ತು. ಬೆಳೆ ಬೆಳೆಯುವ ವೆಚ್ಚ ಮೂರು ಪಟ್ಟು ಹೆಚ್ಚಾಗಿದ್ದು, ಕಬ್ಬು ಬೆಳೆಗಾರರು ತೀವ್ರ ಆತಂಕದಲ್ಲಿದ್ದಾರೆ. ರೈತ ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರೇ ಕಾರಣ ಎಂದು ದೂರಿದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಎಂಎಸ್‌ಪಿ ಘೋಷಣೆ ಮಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ನಾಟಕ ಮಾಡುತ್ತಿದ್ದಾರೆ. ಸಭೆಗೆ ನೂರು ಜನ ರೈತರನ್ನು ಕರೆಸಿ ಅವಮಾನಿಸಲಾಗಿದೆ. ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ತಾವು ಸಭೆಗೆ ಹೋಗಿಲ್ಲ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಜೋಶಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಬ್ಬು ಅರೆಯುವ ಹಂಗಾಮು ಆರಂಭವಾಗಬೇಕಿದ್ದು, ಇನ್ನೂ ನಾಲ್ಕು ದಿನಗಳೊಳಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸದಿದ್ದರೆ ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಧರಣಿ ನಡೆಸುವುದರ ಜತೆಗೆ ವಿಮಾನ ನಿಲ್ದಾಣಗಳ ಬಂದ್‌ಗೂ ಕರೆ ನೀಡುವ ಎಚ್ಚರಿಕೆ ನೀಡಿದರು.

ದೇಶದಲ್ಲಿ ಸಕ್ಕರೆಗೆ ಕೊರತೆ ಇರುವ ಹಿನ್ನೆಲೆಯಲ್ಲಿ ಗೃಹ ಬಳಕೆಯ ಸಕ್ಕರೆ ಮತ್ತು ವಾಣಿಜ್ಯ ಉದ್ದೇಶದ ಸಕ್ಕರೆಯನ್ನು ಪ್ರತ್ಯೇಕವಾಗಿ ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ರೈತ ಮುಖಂಡರು ಸಲಹೆ ನೀಡಿದ್ದಾರೆ. ಎಥನಾಲ್ ಉತ್ಪಾದನೆಯಿಂದ ದೊರೆಯುವ ಸಂಪೂರ್ಣ ಪ್ರಮಾಣವನ್ನು ಸರ್ಕಾರ ಖರೀದಿಸಿದರೆ ಕಬ್ಬು ಬೆಳೆಗಾರರ ಜತೆಗೆ ಭತ್ತ ಮತ್ತು ಮೆಕ್ಕೆಜೋಳ ಬೆಳೆಗಾರರಿಗೂ ಅನುಕೂಲವಾಗಲಿದೆ ಎಂದರು.

SC-ST Reservation: ರಾಜ್ಯದ ಎಸ್‌ಸಿ, ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದು ಮಾಡಿದ ಹೈಕೋರ್ಟ್

ಕಬ್ಬಿನ ಎಂಎಸ್‌ಪಿ ಏರಿಕೆ, ಸಕ್ಕರೆ ಕಾರ್ಖಾನೆಗಳ ಆರಂಭ ಹಾಗೂ ರೈತರ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.