ಬೆಳಗಾವಿ, ಫೆ.4: ವಂಟಮೂರಿ ಗ್ರಾಮದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ (Vantamuri case) 12 ಜನ ಆರೋಪಿಗಳಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ಕೋರ್ಟ್‌ದಲ್ಲೇ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.
ಏನಿದು ಪ್ರಕರಣ?
2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ನಂತರ ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದರು. ಈ ಘಟನೆಗೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗಿತ್ತು.
ಘಟನೆಯ ನಂತರ ಓಡಿಹೋಗಿದ್ದ ಪ್ರೇಮಿಗಳನ್ನು ಪೊಲೀಸರು ಪತ್ತೆಹಚ್ಚಿ ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಿದ್ದರು. ದಂಪತಿ ಪ್ರಸ್ತುತ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಕೊಟ್ಟೂರು ತ್ರಿವಳಿ ಕೊಲೆ ಕೇಸ್‌ಗೆ ಟ್ವಿಸ್ಟ್; ಹಣಕ್ಕಾಗಿ ಮಾವನ ಜತೆ ಸೇರಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ!
ಈ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಬಾಲಾಪರಾಧಿ ಸೇರಿ 13 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಬೆಳಗಾವಿ ಹಿಂಡಲಗಾ ಜೈಲಿನಿಂದ ಪೊಲೀಸ್ ವಾಹನಗಳಲ್ಲಿ ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಎರಡು ವರ್ಷಗಳ ವಿಚಾರಣೆಯ ಬಳಿಕ, ಬಾಲಾಪರಾಧಿಯನ್ನು ಹೊರತುಪಡಿಸಿ ಉಳಿದ 12 ಮಂದಿ ಆರೋಪಿಗಳು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ.