ಬೆಳಗಾವಿ, ಜೂ. 11: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿದ್ದಾರೆ. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜತೆಗೆ, ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಗುರುವಾರ (ಜೂನ್ 11) ಬೆಳಗಾವಿ ಗ್ರಾಮೀಣ ಕ್ಷೇತ್ರದ ಓಂಕಾರ್ ನಗರಕ್ಕೆ ಭೇಟಿ ನೀಡಿದ ಅವರು, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ, ಈವರೆಗೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಆರಂಭವಾಗಲಿರುವ ಹೊಸ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಬಳಿಕ ಹಿಂಡಲಗಾ ಗ್ರಾಮದ ಸಂಕಲ್ಪ ಲೇಔಟ್‌ಗೆ ಭೇಟಿ ನೀಡಿದ ಅವರು, ಸ್ಥಳೀಯರು ಎದುರಿಸುತ್ತಿರುವ ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಖುದ್ದಾಗಿ ಮಾಹಿತಿ ಪಡೆದು, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಲೇಔಟ್‌ನಲ್ಲಿ ಈಗಾಗಲೇ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಲಾಯಿತು. ಜತೆಗೆ, ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ಅನುಷ್ಠಾನಗೊಳ್ಳಲಿರುವ ಹೊಸ ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲಾಯಿತು.
ಸಚಿವ ಸ್ಥಾನ ಇಲ್ಲದಿದ್ದರೂ ಜನಸ್ಪಂದನೆ ಅಚಲ: ಲಕ್ಷ್ಮಿ ಹೆಬ್ಬಾಳ್ಕರ್ ಜನತಾ ದರ್ಶನದಲ್ಲಿ ಜನಸಾಗರ
ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪರಿಹಾರಕ್ಕೆ ಮುಂದಾಗುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರ್ಯವೈಖರಿ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ನಿರಂತರ ಜನಸಂಪರ್ಕ ಮತ್ತು ಜನಸ್ಪಂದನೆಗೆ ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ʼಇಂತಹ ಜನಪ್ರತಿನಿಧಿಯನ್ನು ಪಡೆದಿರುವುದು ನಮ್ಮ ಭಾಗ್ಯʼ ಎಂದು ಅನೇಕ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.