ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ: ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

Lakshmi Hebbalkar: ಮುಂದಿನ ಮಾರ್ಚ್‌ನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ 3,000 ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ: ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

Profile Siddalinga Swamy Mar 24, 2025 8:22 PM

ಬೆಳಗಾವಿ: ಮಹಿಳೆಯರ ಸಬಲೀಕರಣಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್‌ನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಘೋಷಿಸಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ 3,000 ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿ, ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ ಎಂದರು.

ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಠವಾದ ಮೌಲ್ಯ. ಹಿಂದಿನಿಂದಲೂ ಮಾತೃ ದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ ಮಗು ಬೆಳವಣಿಗೆ ಹೊಂದಿದಂತೆ ಮುಂದುವರಿಯುತ್ತ ಹೋಗುತ್ತದೆ. ಒಂದು ಮಗುವಿನ ಬೆಳವಣಿಗೆ ಎಂದರೆ ಅದು ಸಮಾಜದ ಬೆಳವಣಿಗೆ, ದೇಶದ ಬೆಳವಣಿಗೆ, ಮಗುವನ್ನು ಸಮಾಜದ ಆಸ್ತಿಯಾಗಿ ಬೆಳೆಸಲು ಈ ಸಂಸ್ಕಾರಗಳು ಅತ್ಯಂತ ಅಗತ್ಯ. ಮಗು ನಾಳೆಯ ಉತ್ತಮ ಪ್ರಜೆಯಾಗಬೇಕು, ಸಮಾಜಕ್ಕೆ ಆಸ್ತಿಯಾಗಬೇಕು ಎಂದು ಹೇಳಿದರು.

ಅಂಗನವಾಡಿಗೆ ಹೈಟೆಕ್ ಸ್ಪರ್ಶ

ನಾನು ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೊಸರೂಪ ಕೊಡುತ್ತಿದ್ದೇನೆ. ಅಂಗನವಾಡಿ ಇಲಾಖೆಗೆ ಹೈಟೆಕ್ ಸ್ಪರ್ಶ ಕೊಟ್ಟಿದ್ದು, ಸರ್ಕಾರಿ ಮಾಂಟೆಸರಿ ತರಗತಿಗಳನ್ನು ಆರಂಭಿಸಲಾಗಿದೆ. ಇದೀಗ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

100 ವಿಶೇಷ ಚೇತನರಿಗೆ ವೀಲ್‌ಚೇರ್

ಕ್ಷೇತ್ರದ 100 ಮಂದಿಗೆ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್, ಬ್ರೈಲ್ ವಾಚ್, ಲ್ಯಾಪ್‌ಟಾಪ್‌ಗಳನ್ನು ನೀಡಲಾಗಿದೆ ಎಂದರು.

ಜನರ ಹೃದಯದಲ್ಲಿ ಸರ್ಕಾರ

ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸರ್ಕಾರ ಜನರಿಗೆ ಮತ್ತಷ್ಟು ಹತ್ತಿರ ಆಗುತ್ತದೆ. ಜನರ ಹೃದಯದಲ್ಲಿ ಸರ್ಕಾರ ಇರಬೇಕು. ಒಂದು ತಿಂಗಳು ಪೂರ್ತಿ ಮುಂದಿನ ವರ್ಷದಿಂದ ಎಲ್ಲ ಜಿಲ್ಲೆಗಳಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗರ್ಭಿಣಿಯರೊಂದಿಗೆ ಊಟ ಮಾಡಿದ ಸಚಿವೆ

ಕಾರ್ಯಕ್ರಮದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗರ್ಭಿಣಿಯರಿಗೆ ಹೋಳಿಗೆ ಊಟ ಬಡಿಸಿದರು. ಬಳಿಕ ಅವರೊಂದಿಗೆ ಊಟ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ಸಚಿವರಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸಾಥ್ ನೀಡಿದರು.

ಮಳಿಗೆಗಳಿಗೆ ಸಚಿವೆಯಿಂದ ಚಾಲನೆ

ಸಮಾರಂಭಕ್ಕೂ ಮುನ್ನ ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು. ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯಿತಿ ಎನ್.ಆರ್.ಎಲ್.ಎಂ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗ್‌ಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Karnataka Weather: ನಾಳೆ ಕೊಡಗು, ಹಾಸನ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಸಚಿವರ ಸಹೋದರಿಯರು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ. ಹೆಗಡೆ, ಇಲಾಖೆಯ ಉಪ ನಿರ್ದೇಶಕ ನಾಗರಾಜ್.ಆರ್, ದಲಿತ ಮುಖಂಡ ಮಲ್ಲೇಶ ಚೌಗಲೆ, ಜಯಶ್ರೀ ಮಾಳಗಿ, ಯುವರಾಜ ಕದಂ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.