ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BIMS Hospital: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೆಳಗಾವಿ ಜಿಲ್ಲೆಗೆ ಗರಿ ಇದ್ದಂತೆ: ಲಕ್ಷ್ಮಿ ಹೆಬ್ಬಾಳ್ಕರ್‌

Laxmi Hebbalkar: ಬೆಳಗಾವಿಯಲ್ಲಿ ನಿರ್ಮಾಣವಾಗಿರುವ ಈ ಅತ್ಯಾಧುನಿಕ ಆಸ್ಪತ್ರೆಗೆ ನಮ್ಮ ಸರ್ಕಾರ ತಜ್ಞ ವೈದ್ಯರ ನೇಮಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ. ಸಾರ್ವಜನಿಕರು ಇದರ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆ ಎಂಬ ಕೀಳರಿಮೆಯಿಂದ ಎಲ್ಲರೂ ಹೊರಬರಬೇಕು. ಈ ಆಸ್ಪತ್ರೆಯು ಆರೋಗ್ಯ ಕ್ಷೇತ್ರದಲ್ಲಿ ನಾವು ಮಾಡುತ್ತಿರುವ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

-

Profile Siddalinga Swamy Oct 4, 2025 7:11 PM

ಬೆಳಗಾವಿ: ಕರ್ನಾಟಕಕ್ಕೆ ಎರಡನೇ ರಾಜಧಾನಿ ಎಂದು ಗುರುತಿಸಿಕೊಂಡಿರುವ ಬೆಳಗಾವಿ ನಗರ ವೇಗವಾಗಿ ಬೆಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಕಾಳಜಿಯಿಂದ ಕರ್ನಾಟಕದ ಜತೆಗೆ ಬೆಳಗಾವಿ ಕೂಡ ಅಭಿವೃದ್ಧಿ ಹೊಂದುತ್ತಿದ್ದು, ಇಲ್ಲಿನ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಂದು ಲೋಕಾರ್ಪಣೆಗೊಂಡಿದ್ದು ಈ ಭಾಗದ ಜನರಿಗೆ ಖುಷಿ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Laxmi Hebbalkar) ಹೇಳಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)‌ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ಚನ್ನಮ್ಮ ವಿಶ್ವವಿದ್ಯಾಲಯದ ವಿವಿಧ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಚಿವರು ಮಾತನಾಡಿದರು.

Laxmi Hebbalkar 1

ಈ ರಾಜ್ಯಕ್ಕೆ, ಬಡವರಿಗೆ, ರೈತರಿಗೆ, ಹಿಂದುಳಿದವರಿಗೆ ಅತೀ ಹೆಚ್ಚು ಜನಪರ ಯೋಜನೆಗಳನ್ನು ಜಾರಿಗೆ ತಂದವರೆಂದರೆ ಅದು ಸಿದ್ದರಾಮಯ್ಯನವರು. ಈ ಹಿಂದೆ 2013ರಿಂದ 2018 ರವರೆಗೆ ಅವರ ಆಡಳಿತ ವೈಖರಿಯನ್ನು ನಾವು- ನೀವೆಲ್ಲ ಕಂಡಿದ್ದೇವೆ. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ನಮ್ಮ ಕಣ್ಮುಂದಿದೆ. ಈ ಅವಧಿಯಲ್ಲಿ ಘೋಷಣೆ ಮಾಡಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದರ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದರು.

ಸಚಿವ ಶರಣಪ್ರಕಾಶ್‌ ಪಾಟೀಲ್‌ ಅವರ ಕಾಳಜಿಯಿಂದಾಗಿ ಇಂದು ಜಿಲ್ಲಾ ಕೇಂದ್ರಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣವಾಗುತ್ತಿವೆ. ಜಿಲ್ಲಾಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ಬಡವರಿಗೆ ಅನುಕೂಲ ಆಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ ಸಿಗಲಿದೆ ಎಂಬುದನ್ನು ಬಿಮ್ಸ್‌ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ಸಾಬೀತು ಮಾಡಿ ತೋರಿಸಬೇಕು ಎಂದು ಸಚಿವರು ಕರೆ ನೀಡಿದರು.

ಬೆಳಗಾವಿಯಲ್ಲಿ ನಿರ್ಮಾಣವಾಗಿರುವ ಈ ಅತ್ಯಾಧುನಿಕ ಆಸ್ಪತ್ರೆಗೆ ನಮ್ಮ ಸರ್ಕಾರ ತಜ್ಞ ವೈದ್ಯರ ನೇಮಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ. ಸಾರ್ವಜನಿಕರು ಇದರ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆ ಎಂಬ ಕೀಳರಿಮೆಯಿಂದ ಎಲ್ಲರೂ ಹೊರಬರಬೇಕು. ಈ ಆಸ್ಪತ್ರೆಯು ಆರೋಗ್ಯ ಕ್ಷೇತ್ರದಲ್ಲಿ ನಾವು ಮಾಡುತ್ತಿರುವ ಪ್ರಗತಿಗೆ ಸಾಕ್ಷಿಯಾಗಿದೆ. ಇದು ನಿಸ್ಸಂದೇಹವಾಗಿ ಈ ಪ್ರದೇಶದಲ್ಲಿ ಗುಣಮಟ್ಟದ ವೈದ್ಯಕೀಯ ಆರೈಕೆಯ ಕೇಂದ್ರವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ವಿಶ್ವವಿದ್ಯಾಲಯಕ್ಕೆ ಆಗಬೇಕಾದ ಎಲ್ಲ ಕೆಲಸಗಳನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ಬೇಗ ವಿಶ್ವವಿದ್ಯಾಲಯ ಉದ್ಘಾಟನೆಯಾಗುವ ದಿಸೆಯಲ್ಲಿ ಪ್ರಯತ್ನಿಸಲಾಗುವುದು. ಮುಖ್ಯಮಂತ್ರಿಗಳಿಂದಲೇ ನೂತನ ವಿಶ್ವವಿದ್ಯಾಲಯ ಕ್ಯಾಂಪಸ್‌ ಉದ್ಘಾಟಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ‌

ಈ ಸುದ್ದಿಯನ್ನೂ ಓದಿ | CM Siddaramaiah: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ: ಸಿಎಂ ಸಿದ್ದರಾಮಯ್ಯ

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ, ಸಚಿವರಾದ ಡಾ.ಶರಣ್‌ಪ್ರಕಾಶ್‌ ಪಾಟೀಲ್‌, ರಾಮಲಿಂಗಾರೆಡ್ಡಿ, ಡಾ.ಎಂ.ಸಿ.ಸುಧಾಕರ್‌, ಶಾಸಕರಾದ ಆಸೀಫ್‌ ಸೇಠ್‌, ಅಶೋಕ್‌ ಪಟ್ಟಣ್‌, ಭರಮಗೌಡ ಕಾಗೆ, ಮಹಾಂತೇಶ್‌ ಕೌಜಲಗಿ, ಬಾಬಾ ಸಾಹೇಬ್ ಪಾಟೀಲ್‌, ವಿಧಾನಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ, ನಾಗರಾಜ್‌ ಯಾದವ್‌, ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ್‌ ನಾವಲಗಟ್ಟಿ, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭಾಕರ್‌ ಕೋರೆ, ಬಿಮ್ಸ್‌ ಸಿಬ್ಬಂದಿ ವರ್ಗ, ಚನ್ನಮ್ಮ ವಿವಿ ಸಿಬ್ಬಂದಿ, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.