BJP Protest: ನಾಳೆ ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ; ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಳಗಾವಿ ಅಧಿವೇಶನ ವೇಳೆ ಈ ಬಾರಿ ಸಾಲು, ಸಾಲು ಪ್ರತಿಭಟನೆಗಳು ನಡೆಯಲಿವೆ. ಈಗಾಗಲೇ ಸುಮಾರು 50ಕ್ಕೂ ಅಧಿಕ ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಕೋರಿ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಸರು ನೊಂದಾಯಿಸಿವೆ. ಈ ನಡುವೆ ನಾಳೆ ರೈತರ ಪರವಾಗಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.
ಬೆಳಗಾವಿಯಲ್ಲಿ ಪ್ರತಿಭಟನಾ ಸ್ಥಳವನ್ನು ಬಿ.ವೈ.ವಿಜಯೇಂದ್ರ ಪರಿಶೀಲಿಸಿದರು. -
ಬೆಳಗಾವಿ, ಡಿ.8: ಕರ್ನಾಟಕ ವಿಧಾನಮಂಡಲ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಸೋಮವಾರ ಆರಂಭವಾಗಿದ್ದು, ಈ ಬಾರಿಯೂ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಸದನದ ಒಳಗೆ ಹಾಗೂ ಹೊರಗೆ ಪ್ರಮುಖವಾಗಿ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಮುಂದಾಗಿರುವ ಬಿಜೆಪಿ, ನಾಳೆ (ಡಿ.9) ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ (BJP Protest) ಹಮ್ಮಿಕೊಂಡಿದ್ದು, ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯದ ಕಮಲ ನಾಯಕರು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಭಟನಾ ಸ್ಥಳ ಮಾಲಿನಿ ಸಿಟಿ ಮೈದಾನಕ್ಕೆ ಭೇಟಿ ನೀಡಿ ಪೂರ್ವ ತಯಾರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಶಾಸಕ ವಿಠ್ಠಲ ಹಲಗೇಕರ್, ಅಭಯ್ ಪಾಟೀಲ್ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ್ ಪಾಟೀಲ್, ಬೆಳಗಾವಿ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಶ್ರೀ ಸುಭಾಷ್ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
ಪ್ರತಿಭಟನೆ ಬಗ್ಗೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಕಬ್ಬು ಬೆಳೆಗಾರರು, ಮೆಕ್ಕೆಜೋಳ, ಭತ್ತ, ತೊಗರಿ ಬೆಳೆಗಾರರಿಗೆ ಅನ್ಯಾಯವಾಗಿದೆ. ಹೀಗಾಗಿ ನಾಳೆ 20 ಸಾವಿರಕ್ಕೂ ಹೆಚ್ಚು ರೈತರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ನಾಳೆ ನಾವು ರೈತರಿಗಾಗಿ ಹೋರಾಟ ಮಾಡುತ್ತೇವೆ. ರೈತರ ಪರವಾಗಿ ಧ್ವನಿ ಎತ್ತುತ್ತೇವೆ. ರೈತರ ಆತ್ಮಹತ್ಯೆ ಪ್ರಕರಣದಲ್ಲಿ ದೇಶಕ್ಕೆ ರಾಜ್ಯ ಎರಡನೇ ಸ್ಥಾನದಲ್ಲಿದೆ. 2400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿ ಖಾಲಿ, ಕಾಂಗ್ರೆಸ್ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.