ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodimutt Seer) ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಕೋಡಿಮಠ ಶ್ರೀಗಳು, ಸಕ್ರಾಂತಿ ಕಳೆಯಬೇಕು, ಅರಸನ ಭಂಡಾರ ಬಜೆಟ್ ಆಗಬೇಕು. ಸಕ್ರಾಂತಿವರೆಗೂ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭದ ಮಾತಲ್ಲ, ಅದು ತುಂಬಾ ಕಷ್ಟ. ಸ್ವತಃ ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತಾವೇ ಅಧಿಕಾರದಿಂದ ಕೆಳಗೆ ಇಳಿಯುವವರೆಗೂ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಪಿಣರಾಯಿ ವಿಜಯನ್‌ಗೆ ವಾಸ್ತವ ಸಂಗತಿಗಳ ಅರಿವಿಲ್ಲ: ಸಿಎಂ ಟೀಕೆ
ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಎಂಬ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ, ಆದರೂ ಕೂಡ ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ.
ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ. ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.