ಬೆಳಗಾವಿ: ಮಲಪ್ರಭಾ ನದಿಗೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋದ ಪರಿಣಾಮ ಬೆಳಗಾವಿ - ಗೋವಾ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದೆ. ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. ತಾತ್ಕಾಲಿಕವಾಗಿ ಬೃಹತ್ ಪೈಪ್‌ನಿಂದ ಸೇತುವೆ ನಿರ್ಮಿಸಲಾಗಿತ್ತು. ಆದರೆ, ಮಳೆ ಆರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ರಭಸಕ್ಕೆ ಸೇತುವೆ ಕೊಚ್ಚಿಕೊಂಡು ಹೋಗಿದೆ.
ಸದ್ಯ ಚೋರ್ಲಾ ಮಾರ್ಗವಾಗಿ ಗೋವಾಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾನಾಪುರ ಮಾರ್ಗವಾಗಿ ರಾಮನಗರದಿಂದ ಗೋವಾಗೆ ತೆರಳಬಹುದು.
ರೆಡ್ ಅಲರ್ಟ್; ಇಂದು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರದ ಕಾಲ ಮುಂಗಾರು ಮಳೆ ಅಬ್ಬರಿಸುವ ನಿರೀಕ್ಷೆ ಇದೆ. ಜೂನ್ 15ರಂದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather) ರೆಡ್ ಅಲರ್ಟ್ ಘೋಷಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಜೂನ್ 16ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಜೂನ್ 17ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮೈಸೂರು, ಚಾಮರಾಜನಗರ, ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | Health Tips: ಸಿಕ್ಕಾಪಟ್ಟೆ ತಿಂದ್ರಾ?: ಹೊಟ್ಟೆಭಾರ ಇಳಿಸಲು ಇಲ್ಲಿವೆ ಟಿಪ್ಸ್!
ಜೂನ್ 18ರಂದು ಕರಾವಳಿ ಜಿಲ್ಲೆಗಳು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಭಾಗದಲ್ಲಿ ಮಳೆ ಅಬ್ಬರಿಸಲಿದೆ.