Karnataka Winter Session: ಕನ್ನಡ ಮಾಧ್ಯಮದ ಯಾವುದೇ ಶಾಲೆಯನ್ನು ಮುಚ್ಚಲ್ಲ: ಮಧು ಬಂಗಾರಪ್ಪ
ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಆದ್ಯತೆ ಮೇರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ. -
ಬೆಳಗಾವಿ, ಡಿ.8: ನಮ್ಮ ರಕ್ತದಲ್ಲಿ ಕನ್ನಡ ಇದೆ. ನಮ್ಮ ಸರ್ಕಾರ ಕನ್ನಡ ಮಾಧ್ಯಮದ ಯಾವುದೇ ಶಾಲೆಯನ್ನು ಮುಚ್ಚಲ್ಲ. ಒಬ್ಬ ಮಗು ಇದ್ದರೂ, ಒಂದು ಟೀಚರ್ ಇರುತ್ತಾರೆ. ಮಕ್ಕಳು ಬಂದರೆ ಹೊಸ ಶಾಲೆಗಳನ್ನೂ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಚಿದಾನಂದ್ ಎಂ.ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ ಅವರು, ಇವತ್ತಿನ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಮುಂದಾಗಿದ್ದಾರೆ ಅನ್ನಿಸುತ್ತಿದೆ. ಗ್ರಾಮ ಪಂಚಾಯಿತಿಗೆ ಒಂದು ಶಾಲೆ ಮಾಡಿ ಸರ್ಕಾರ ಕನ್ನಡ ಶಾಲೆಗಳನ್ನು ಮುಚ್ಚೋ ಹುನ್ನಾರ ಮಾಡ್ತಿದೆ. ಕೆಪಿಎಸ್ ಶಾಲೆಗಳಿಗೆ ಹಳೆ ಕಟ್ಟಡ ಬೇಡ, ಹೊಸ ಕ್ಯಾಂಪ್ ನಿರ್ಮಾಣ ಮಾಡಬೇಕು. ಒಂದು ಗ್ರಾಮಕ್ಕೆ ಒಂದು ಪ್ರಾಥಮಿಕ ಶಾಲೆ ಇರಬೇಕು. ಸರ್ಕಾರಿ ಶಾಲೆ ಮುಚ್ಚಬೇಡಿ. ಕೆಪಿಎಸ್ ಶಾಲೆಯನ್ನ 6 ರಿಂದ 12ನೇ ತರಗತಿಗೆ ಮಾಡಿ. ಪ್ರಾಥಮಿಕ ಶಾಲೆಗಳು ಪ್ರತಿ ಗ್ರಾಮದಲ್ಲಿ ಇರಲಿ ಎಂದು ಚಿದಾನಂದಗೌಡ ಒತ್ತಾಯಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವರು, 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು. ನಾವು ಬಜೆಟ್‌ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ. 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಳಗಾವಿ ಅಧಿವೇಶನದ ವಿಡಿಯೋ ಇಲ್ಲಿದೆ
ಈ ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ಧಗೊಳಿಸುವ ಮೂಲಕ ಕೆಪಿಎಸ್ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ, ಅಗಲಿದ ಗಣ್ಯರಿಗೆ ಸಿಎಂ ಸಂತಾಪ
ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆಪಿಎಸ್ ಶಾಲೆಗಳ ಧೈಯವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ‘ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.