Karnataka Budget 2025: ಬೆಂಗಳೂರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ
CM Siddaramaiah: ಮೈಸೂರಿನ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನ ಒಟ್ಟಾರೆ 120 ಕೋಟಿ ವೆಚ್ಚದಲ್ಲಿ ನಿರ್ಮಿಸುವುದು, ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1000 ಹೊಸ ಡೀಸೆಲ್ ಬಸ್ಸುಗಳನ್ನು ಜಿಸಿಸಿ ಆಧಾರದಲ್ಲಿ ಸೇರ್ಪಡೆಗೊಳಿಸಲಾಗುದು. ಜತೆಗೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ, ಮೇಕೆ ಮಾರುಕಟ್ಟೆ ಪ್ರಾರಂಭ ಮಾಡಲಾಗುದು ಎಂದು ಸಿಎಂ ಮಾಹಿತಿ ನೀಡಿದರು.


ಬೆಂಗಳೂರು: 2025-26ನೇ ಸಾಲಿನ ಮುಂಗಡಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದು, ಬೆಂಗಳೂರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಟನಲ್ ಯೋಜನೆಗೆ 40 ಸಾವಿರ ಕೋಟಿ ಘೋಷಿಸಿದ್ದಾರೆ. ಜತೆಗೆ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಅನುದಾನ ಹೆಚ್ಚಿಸಲಾಗಿದೆ. ಬ್ರ್ಯಾಂಡ್ ಬೆಂಗಳೂರಿನ 21 ಯೋಜನೆಗೆ 1800ಕೋಟಿ ಘೋಷಿಸಿದ್ದಾರೆ. ಬೆಂಗಳೂರಿನ ಹವಾಮಾನ ವೈಪರೀತ್ಯ ನಿಯಂತ್ರಣಕ್ಕಾಗಿ ಹಾಗೂ ಒಳಚರಂಡಿ ಹಾಗೂ ಎಸ್‌ಟಿಪಿ ಗಾಗಿ 3000ಕೋಟಿ ನೆರವು ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆಗೆ 555ಕೋಟಿ ಅನುದಾನ ಕಲ್ಪಿಸಲಾಗಿದೆ. ಹಾಗೆಯೇ ಮುಂದಿನ ಎರಡು ವರ್ಷದಲ್ಲಿ ನಮ್ಮ ಮೆಟ್ರೋ ಜಾಲವನ್ನ 98.60ಕಿಮೀಗೆ ಹೆಚ್ಚಳ ಮಾಡುವ ಹಾಗೂ ಮೆಟ್ರೋ ಜಾಲವನ್ನ ದೇವನಹಳ್ಳಿವರೆಗೂ ವಿಸ್ತರಣೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ಪ್ರೊಜೆಕ್ಟ್ ಮೆಜೆಸ್ಟಿಕ್ ಯೋಜನೆಯ ಅಡಿ ಸಾರ್ವಜನಿಕ ಖಾಸಗಿ ಸಹ ಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶಿಸಲಾಗಿದೆ.
ಮೈಸೂರಿನ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನ ಒಟ್ಟಾರೆ 120 ಕೋಟಿ ವೆಚ್ಚದಲ್ಲಿ ನಿರ್ಮಿಸುವುದು, ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1000 ಹೊಸ ಡೀಸೆಲ್ ಬಸ್ಸುಗಳನ್ನು ಜಿಸಿಸಿ ಆಧಾರದಲ್ಲಿ ಸೇರ್ಪಡೆಗೊಳಿಸಲಾಗುದು. ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ, ಮೇಕೆ ಮಾರುಕಟ್ಟೆ ಪ್ರಾರಂಭ ಮಾಡಲಾಗುದು ಎಂದರು.
ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯ ಸರ್ಕಾರವು ಕೈಗಾರಿಕಾ ನೀತಿ 2025-30ಕ್ಕೆ ಚಾಲನೆ ನೀಡಿದ್ದು, ಇದು 2030 ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಜಿಸುವ ಗುರಿ ಹೊಂದಿದೆ. 2024-25ನೇ ಸಾಲಿನಲ್ಲಿ ಕೈಗಾರಿಕಾ ವಲಯವು ಶೇ.5.8ರಷ್ಟು ಬೆಳವಣಿಗೆ ಸಾಧಿಸಿದೆ. ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ರೂ. ಆರ್ಥಿಕ ನೆರವು ಮತ್ತು ಸಹಾಯಧನವನ್ನು ಒದಗಿಸಲು ಸರ್ಕಾರವು ಸಮ್ಮತಿಸಿದೆ.