ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ತಂತ್ರಜ್ಞಾನವುಳ್ಳ 108 ಆಂಬ್ಯುಲೆನ್ಸ್ ಸೇವೆ: ಸಿಎಂ ಸಿದ್ದರಾಮಯ್ಯ

CM Siddaramaiah: ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ "108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ" ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆಂಬ್ಯುಲೆನ್ಸ್ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 108 ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಬೆಂಗಳೂರು, ಮೇ 25: ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ 108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತ್ವರಿತ ಗತಿಯಲ್ಲಿ ಚಿಕಿತ್ಸೆ ದೊರೆಯಬೇಕು. ಈ ದಿಸೆಯಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಆರೋಗ್ಯ ಸೇವೆ ದೊರೆಯಲು ಈ ಕೇಂದ್ರ ಅತ್ಯಂತ ಸಹಕಾರಿಯಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆಂಬ್ಯುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ "108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ" ವನ್ನು ಸೋಮವಾರ ಉದ್ಘಾಟಿಸಿ, ಅವರು ಮಾತನಾಡಿದರು.

ರಾಜ್ಯದಲ್ಲಿ ಸುಮಾರು 18 ವರ್ಷಗಳಿಂದ 108 ಆಂಬ್ಯುಲೆನ್ಸ್ ಸೇವೆಯನ್ನು ನೀಡಲಾಗುತ್ತಿದೆ. 2025-26ರ ಬಜೆಟ್ ಘೋಷಣೆಯಂತೆ 108 ತುರ್ತು ಆಂಬ್ಯುಲೆನ್ಸ್ ಸೇವೆಗಳ ನಿರ್ವಹಣೆಗೆ ಮೀಸಲಾದ ವ್ಯವಸ್ಥೆಯನ್ನು ರೂಪಿಸಲಾಗಿದೆ. ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ಲಭಿಸುವಂತಾಗುವುದು ಮುಖ್ಯ. ಸರ್ಕಾರದ ಗುಣಮಟ್ಟದ ಆರೋಗ್ಯ ಸೇವೆಯಿಂದ ಜನರ ವಿಶ್ವಾಸ ಹೆಚ್ಚುತ್ತದೆ ಎಂದರು.

ರಸ್ತೆ ಅಪಘಾತಗಳು, ಹೆರಿಗೆ, ಹೃದಯರೋಗಿಗಳು ಸೇರಿದಂತೆ ಹಲವು ಕ್ಲಿಷ್ಟ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಅತ್ಯವಶ್ಯವಾಗಿದ್ದು, ಆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ ದೊರೆತರೆ ರೋಗಿಗಳು ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. ಗೋಲ್ಡನ್ ಅವರ್ ನಲ್ಲಿ ದೊರೆತ ಚಿಕಿತ್ಸೆಯಲ್ಲಿ ಸುಮಾರು ಶೇ.80 ರಷ್ಟು ಜನರು ಬದುಕುಳಿದಿದ್ದಾರೆ. ಜೀವನ್ಮರಣದ ಹೋರಾಟದಲ್ಲಿ ತುರ್ತು ಚಿಕಿತ್ಸೆಯು ಹೆಚ್ಚಿನ ಮಹತ್ವವನ್ನು ಹೊಂದಿದೆ. ಬೆಂಗಳೂರು ನಗರದಲ್ಲಿ 65 ರಿಂದ 70 ಆಂಬ್ಯುಲೆನ್ಸ್‌ಗಳಿದ್ದು, ತುರ್ತು ಚಿಕಿತ್ಸೆಗೆ ನೆರವಾಗಿವೆ. 108 ಆಂಬ್ಯುಲೆನ್ಸ್ ವ್ಯವಸ್ಥೆ ಖಾಸಗಿಯವರ ಕೈಯಲ್ಲಿದ್ದಾಗ, ಅವರ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಿರಲಿಲ್ಲ. ಆದರೆ ಪ್ರಸ್ತುತ ಈ ವ್ಯವಸ್ಥೆ ಸರ್ಕಾರದ ಅಧೀನದಲ್ಲಿರುವುದರಿಂದ ಈ ಸೇವೆಯ ಹೊಣೆಗಾರಿಕೆ ಹೆಚ್ಚಿದೆ ಎಂದು ತಿಳಿಸಿದರು.‌

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಆಕ್ರೋಶ

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಮ್ಮ ಆರೋಗ್ಯ ಸಮಸ್ಯೆಗೆ ನೆರವು ಕೇಳಿ ಬರುವ ಜನರು ಸರ್ಕಾರದ ಧನಸಹಾಯವನ್ನು ಬಯಸುತ್ತಾರೆ. ಆದರೆ ಜನರು ಖಾಸಗಿ ಆಸ್ಪತ್ರೆಗೆ ಹೋಗಿ, ಸರ್ಕಾರದಿಂದ ಧನಸಹಾಯ ಕೇಳುವ ಬದಲು, ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಬೇಕು. ಕ್ಯಾನ್ಸರ್ ಸೇರಿದಂತೆ ಹಲವು ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದುಬಾರಿಯಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಯಿದೆ. ಸಾಮಾನ್ಯ ಜನರಿಗೆ ಗುಣಮಟ್ಟದ ಆರೊಗ್ಯ ವ್ಯವಸ್ಥೆಯನ್ನು ನೀಡಲು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.