ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಸೇರಿಸಿದ್ದ ಸಜಾ ಕೈದಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಕೈದಿ ಆಸ್ಪತ್ರೆಯಿಂದ (Kidwai Hospital) ಪರಾರಿಯಾಗಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಚೇತನ್ ಕಲ್ಯಾಣಿ ಪರಾರಿಯಾದ ಸಜಾ ಕೈದಿ. ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯ ಬೇಜವಾಬ್ದಾರಿಯಿಂದ ಅಪರಾಧಿ ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಸಜಾ ಕೈದಿಯನ್ನು ಬಿಜಾಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಾಯಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅಪರಾಧಿಯನ್ನ ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತಂದಿದ್ದ ವೇಳೆ ಜೈಲು ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಆಸ್ಪತ್ರೆ ಸಿಬ್ಬಂದಿ ಹಿಡಿಯಲು ಪ್ರಯತ್ನಸಿದರೂ ಸಿಗದೇ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಪ್ಪನ ಅಗ್ರಹಾರ ಸಿಬ್ಬಂದಿ ರಘು ಕೊಟ್ಟ ದೂರಿನ ಮೇರೆಗೆ ಬಿಎನ್‌ಎಸ್ 262ರ ಅಡಿ ಪ್ರಕರಣ ದಾಖಲಾಗಿದೆ. ಕಳೆದ ಆಗಸ್ಟ್ 3ರಂದು ವಿಜಯಪುರ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಬಾಯಿಯ ಕ್ಯಾನ್ಸರ್ ಇದ್ದ ಕಾರಣ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದ್ದ ನಂತರ ಕಾರಾಗೃಹ ವೈದ್ಯರ ಸಲಹೆ ಮೇರೆಗೆ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಆಗಸ್ಟ್ 21ರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಜಾ ಕೈದಿ ಚೈತನ್ಯ, ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಕೈದಿಗಾಗಿ ಸಿದ್ದಾಪುರ ಪೊಲೀಸರು ಬಲೆ ಬೀಸಿದ್ದಾರೆ.
ಈ ಸುದ್ದಿಯನ್ನೂ ಓದಿ | Bagalkot News: ಶಾಲೆಯಲ್ಲಿ ಇಬ್ಬರು ಮಕ್ಕಳ ಮಧ್ಯೆ ಗಲಾಟೆ; ಕಟ್ಟಿಗೆ ಇರಿತದಿಂದ ಕಣ್ಣು ಕಳೆದುಕೊಂಡ ವಿದ್ಯಾರ್ಥಿ!