ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಅವಘಡ: ಅಧಿಕಾರಿಯ ತಲೆದಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಆದೇಶ

CM Siddaramaiah: ಭಾರಿ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಯ ತಲೆದಂಡವಾಗಿದೆ. ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅಮಾನತುಗೊಳಿಸಿ ನೊಟೀಸ್‌ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರು, ಏ. 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಮೃತಪಟ್ಟ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೊಟೀಸ್‌ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು. ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಗುರುವಾರ ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರ ಸಭೆ ಜರುಗಿತು.

ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ಬುದವಾರ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿ ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು. ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿ ಪ್ರಶ್ನಿಸಿದರು.

ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೊಟೀಸ್‌ ನೀಡಲು ಸೂಚಿಸಿದ ಮುಖ್ಯಮಂತ್ರಿ, ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು. ಬುಧವಾರ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು. ಅಂಡರ್ ಪಾಸ್‌ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಅವರು ಸೂಚಿಸಿದರು.

ಭಾರಿ ಮಳೆಗೆ ಬೆಂಗಳೂರು ತತ್ತರ; ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಯಲ್ಲಿದ್ದಾಗಲೇ ಕುಸಿದ ಕಾಂಪೌಂಡ್‌

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.