Cabinet meeting: ಅರಮನೆ ಟಿಡಿಆರ್ ಪ್ರಕರಣ; 1997ರ ಕಾಯ್ದೆ ಸಿಂಧುತ್ವದ ಬಗ್ಗೆ ಸಚಿವ ಸಂಪುಟ ಮಹತ್ವದ ತೀರ್ಮಾನ
Cabinet meeting: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವ ಸಂಬಂಧಿತ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿಹಿಡಿಯಲು, ಸರ್ವೋಚ್ಚ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸುವಂತೆ ಕೋರುವುದು ಸೇರಿ ಹಲವು ಪ್ರಮುಖ ನಿರ್ಣಯಗಳನ್ನು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಕೈಗೊಳ್ಳಲಾಗಿದೆ.
ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಮಾಹಿತಿ ನೀಡಿದ್ದು, ಈ ಹಿಂದೆ ಹೈಕೋರ್ಟ್ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು 1997ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯವು ದಿನಾಂಕ: 10-12-2024ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗದಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿದೆ. ನ್ಯಾಯಾಂಗ ನಿಂದನೆ ಅರ್ಜಿಯ ವಿಷಯದಲ್ಲಿ ಕಾನೂನಿನ ಪ್ರಕಾರ ಅಗತ್ಯ ಕ್ರಮ ವಹಿಸಲು ಸಚಿವ ಸಂಪುಟವು ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಿದೆ.
ಸರ್ವೋಚ್ಚ ನ್ಯಾಯಾಲಯದ ದಿನಾಂಕ: 21-12-2024ರ ಆದೇಶಾನುಸಾರ ರೂ.2,83,500 ಪ್ರ.ಚ.ಮೀಟರ್‌ಗೆ (ಬಳ್ಳಾರಿ ರಸ್ತೆ) ಮತ್ತು 2,04,000 ಪ್ರ.ಚ.ಮೀಟರ್‌ಗೆ ವನ್ನು (ಜಯಮಹಲ್ ರಸ್ತೆ) ಮೌಲ್ಯದಂತೆ ಟಿ.ಡಿ.ಆರ್ ವನ್ನು ನೀಡಲು ಅಂದಾಜು 3011.00 ಕೋಟಿಗಳ ಆರ್ಥಿಕ ಹೊರೆ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ಸಹ ಅದನ್ನು ತಿರಸ್ಕರಿಸಲಾಗಿದೆ. ಸುಪ್ರೀಂ ಕೋರ್ಟ್‌ನ 2001ರ ಆದೇಶವನ್ನು ಉಲ್ಲಂಘಿಸಿ ಸುಮಾರು ಬೆಂಗಳೂರು ಅರಮನೆಯ 2 ಲಕ್ಷ ಚ.ಮೀಟರ್ ವ್ಯಾಪ್ತಿಯಲ್ಲಿ ಕಾಯಂ ಕಟ್ಟಡಗಳನ್ನು ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲೂ ಸಚಿವ ಸಂಪುಟ ತೀರ್ಮಾನಿಸಿದೆ. 15 ದಿನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ದಿನಾಂಕ 09-01-2025 ರಂದು ಸರ್ಕಾರದ ವತಿಯಿಂದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಸಚಿವ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು
1.₹285 ಕೋಟಿ ವೆಚ್ಚದಲ್ಲಿ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಫಾರ್ಮ್‌ನಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ತೀರ್ಮಾನ
2. 2024-25 ಸಾಲಿನಲ್ಲಿ ಉಚಿತವಾಗಿ ಸಮಗ್ರ ನೇತ್ರ ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕಗಳನ್ನು ವಿತರಿಸುವ ಆಶಾಕಿರಣ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಲು ನಿರ್ಧಾರ
3. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಎರಡನೇ ಹಂತದ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ ₹78.10 ಕೋಟಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
4. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಧುನಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಶವಸಂಸ್ಕಾರ ಮಾಡಲು ಅನುಕೂಲವಾಗುವಂತೆ 10 ಮಹಾನಗರ ಪಾಲಿಕೆ ಮತ್ತು 24 ನಗರಸಭೆಗಳಲ್ಲಿ ತಲಾ 1 ರಂತೆ 34 ಆಧುನಿಕ ವಿದ್ಯುತ್/ ಅನಿಲ ಚಿತಾಗಾರ ನಿರ್ಮಿಸಲು ನಿರ್ಧಾರ
5. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಅನೆಕ್ಸ್ ಕಟ್ಟಡಕ್ಕೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ₹21.08 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧಾರ
6. ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅಡಿಯಲ್ಲಿ ₹238 ಕೋಟಿ ಅಂದಾಜು ಮೊತ್ತದಲ್ಲಿ ನಗರ ಪ್ರವಾಹ ಅಪಾಯ ನಿರ್ವಹಣೆ ಕಾರ್ಯಕ್ರಮ ಅನುಷ್ಠಾನಗೊಳಿಸಲು ನಿರ್ಧಾರ
7. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಅನುಮೋದನೆಯಾಗಿ ಸ್ಥಗಿತಗೊಂಡಿದ್ದ 61,894 ಮನೆಗಳ ನಿರ್ಮಾಣ ಕಾರ್ಯವನ್ನು ₹2,643 ಕೋಟಿ ವೆಚ್ಚದಲ್ಲಿ ಪುನರಾರಂಭಿಸಲು ನಿರ್ಧಾರ
8. ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ 7 ಶೀತಲ ಗೃಹಗಳ ನಿರ್ಮಾಣ ಹಾಗೂ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನೂತನ ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸುವ ₹118 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ
9. ₹246 ಕೋಟಿ ವೆಚ್ಚದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ತೀರ್ಮಾನ
10. ₹413 ಕೋಟಿ ವೆಚ್ಚದಲ್ಲಿ ಬ್ರಾಂಡ್ ಬೆಂಗಳೂರು ಯೋಜನೆ ಅಡಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅನುಮೋದನೆ
11. ₹33.07 ಕೋಟಿ ಅಂದಾಜು ಮೊತ್ತದಲ್ಲಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ನ್ಯೂರೋಲಜಿ ಮತ್ತು ನ್ಯೂರೋ ಸರ್ಜರಿ ವಿಭಾಗದ ಕಟ್ಟಡ ಕಾಮಗಾರಿಗೆ ಅನುಮೋದನೆ
12. ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ಆವರಣದಲ್ಲಿ ಕ್ರೀಡಾ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸಾ ವಿಭಾಗದ ನೂತನ ಕಟ್ಟಡಕ್ಕೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳನ್ನು ₹14 ಕೋಟಿ ವೆಚ್ಚದಲ್ಲಿ ಖರೀದಿಸಲು ತೀರ್ಮಾನ
ಈ ಸುದ್ದಿಯನ್ನೂ ಓದಿ | Actor Darshan: ಆತ್ಮರಕ್ಷಣೆಗಾಗಿ ಗನ್ ಬೇಕೇ ಬೇಕು; ಲೈಸೆನ್ಸ್ ರದ್ದು ಮಾಡದಂತೆ ಪೊಲೀಸರಿಗೆ ನಟ ದರ್ಶನ್ ಮನವಿ