ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹೋರಾಟ ಮುಂದುವರಿಸಲು ಆಶಾ ಕಾರ್ಯಕರ್ತೆಯರ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್‌ ಜತೆಗಿನ ಸಂಧಾನ ವಿಫಲ

ASHA Workers: ಮಾಸಿಕ 15,000 ರೂಪಾಯಿ ಗೌರವ ಧನಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಜತೆ ಸಿಎಂ ಡಿ.ಕೆ. ಶಿವಕುಮಾರ್‌ ಸಂಧಾನ ಸಭೆ ವಿಫಲವಾಗಿದೆ. ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ.

ಬೆಂಗಳೂರಿನಲ್ಲಿ ಡಿಕೆಶಿ ಜತೆ ಆಶಾ ಕಾರ್ಯಕರ್ತೆಯರು ಸಭೆ ನಡೆಸಿದರು

ಬೆಂಗಳೂರು, ನ. 19: ಮಾಸಿಕ 15,000 ರೂಪಾಯಿ ಗೌರವ ಧನ, ನಿವೃತ್ತಿ ಬಳಿಕ 5 ಲಕ್ಷ ರೂಪಾಯಿ ಇಡಿಗಂಟು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಸುತ್ತಿರುವ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ (ASHA Workers Protest). ಗುರುವಾರ (ನವೆಂಬರ್‌ 19) ಆಶಾ ಕಾರ್ಯಕರ್ತೆಯರ ಜತೆಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​​ ಸಭೆ ವಿಫಲವಾಗಿದೆ. ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ.

ಕೊರೆಯುವ ಚಳಿಯನ್ನು ಲೆಕ್ಕಿಸದೆ ಚಿಕ್ಕ ಮಕ್ಕಳ ಜತೆ ಆಶಾ ಕಾರ್ಯಕರ್ತೆಯರು ಹೋರಾಟ ಹಮ್ಮಿಕೊಂಡಿದ್ದಾರೆ. ಹೀಗಾಗಿ ಡಿ.ಕೆ. ಶಿವಕುಮಾರ್​ ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳ ಜತೆ ಸಭೆ ನಡೆಸಿದರು. ʼʼಸಿಎಂ ಜತೆಗಿನ ಸಂಧಾನ ಸಭೆ ವಿಫಲವಾಗಿದೆʼʼ ಎಂದು ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಜತೆ ಸಿಎಂ ಡಿಕೆಶಿ ಸಭೆ:



ಸಿಎಂ ಹೇಳಿದ್ದೇನು?

ಡಿ.ಕೆ. ಶಿವಕುಮಾರ್ ಮಾತನಾಡಿ, ʼʼರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಪ್ರಸ್ತುತ ವಾಸ್ತವಾಂಶಗಳನ್ನು ವಿವರಿಸಲಾಗಿದೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಸಮಯಾವಕಾಶ ಕೋರಿದ್ದೇನೆ. ಸದ್ಯ ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ಬರುತ್ತದೆಯೋ ಅಷ್ಟನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರು 15 ಸಾವಿರ ರೂಪಾಯಿ ಗೌರವಧನ ನೀಡುವಂತೆ ಒತ್ತಾಯಿಸಿದ್ದು, ಒಟ್ಟು 8ರಿಂದ 9 ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅಧಿವೇಶನ ಮುಗಿಯುವ ಮುನ್ನ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಬೇಡಿಕೆಗಳ ಬಗ್ಗೆ ಪರಿಶೀಲಿಸುತ್ತೇವೆ. ಈಗ ಪ್ರತಿಭಟನೆ ಕೈಬಿಟ್ಟು ಮನೆಗೆ ತೆರಳುಬೇಕುʼʼ ಎಂದು ತಿಳಿಸಿದರು. ಇದರಿಂದ ಸಮಾಧಾನಗೊಳ್ಳದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ.

ಸಿಎಂ ಜತೆಗಿನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರು ಸಭೆ ನಡೆಸಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.

ಹಸುಗೂಸುಗಳೊಂದಿಗೆ ಚಳಿಯಲ್ಲಿ ಮಲಗಿರುವ ತಾಯಂದಿರ ಕಣ್ಣೀರು ಸಿಎಂಗೆ ಕಾಣುತ್ತಿಲ್ಲವೇ?: ನಿಖಿಲ್‌ ಕಿಡಿ

ಗೌರವ ಧನ ಎಷ್ಟು?

ಸದ್ಯ ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂಪಾಯಿ ಮತ್ತು ಕೇಂದ್ರ ಸರ್ಕಾರದಿಂದ 3 ಸಾವಿರ ರೂಪಾಯಿ ಸೇರಿ ಒಟ್ಟು 8 ಸಾವಿರ ರೂಪಾಯಿ ಗೌರವ ಧನ ಸಿಗುತ್ತಿದೆ. ಆರೋಗ್ಯ ಇಲಾಖೆಯ ಹಲವು ಜವಾಬ್ದಾರಿ ನಿರ್ವಹಿಸುತ್ತಿರುವ ತಮಗೆ ಈ ಮೊತ್ತ ಸಾಕಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಆಶಾ ಕಾರ್ಯಕರ್ತೆಯರು 15 ಸಾವಿರ ರೂಪಾಯಿ ಮಾಸಿಕ ವೇತನಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author